ಕುಶಾಲನಗರ, ಸೆ. ೨೩: ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಎರಡನೇ ಅವಧಿಯ ಚುನಾವಣೆಗೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ನಿಗದಿಯಾದಂತೆ ಚುನಾವಣೆ ಪ್ರಕ್ರಿಯೆ ನಡೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.
ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಂ ಎಸ್ ಶಿವಾನಂದ ಅವರು ಈ ತಿಂಗಳ ೨೫ರಂದು ನಿಗದಿಯಾಗಿರುವ ಚುನಾವಣೆಗೆ ತಡೆ ಕೋರಿ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಸೋಮವಾರ ನಡೆದ ವಾದ ವಿವಾದಗಳ ನಂತರ ಕುಶಾಲನಗರ ಪಟ್ಟಣ ಪಂಚಾಯಿತಿ ಸೇರಿದಂತೆ ರಾಜ್ಯದ ಒಟ್ಟು ೧೦ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ಇದರ ನಡುವೆ ಎಂ ಎಸ್ ಶಿವಾನಂದ ಅವರು ಮತ್ತೊಂದು ಅರ್ಜಿಯನ್ನು ವಕೀಲರ ಮೂಲಕ ನ್ಯಾಯಾಲಯಕ್ಕೆ ಸಲ್ಲಿಸಿದ್ದು ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಮೊಟಕುಗೊಂಡಿದ್ದು, ಕುಶಾಲನಗರ ಪಟ್ಟಣ ಪಂಚಾಯಿತಿ ಆಡಳಿತವನ್ನು ರದ್ದುಗೊಳಿಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ಕುಶಾಲನಗರ ಪುರಸಭೆಗೆ ತಕ್ಷಣ ಚುನಾವಣೆ ನಡೆಸುವಂತೆ ಕೋರಿ ದಾಖಲೆಗಳನ್ನು ಸಲ್ಲಿಸಿರುವುದಾಗಿ ಶಕ್ತಿಗೆ ಶಿವಾನಂದ ತಿಳಿಸಿದ್ದಾರೆ.
ಈ ಅರ್ಜಿಯನ್ನು ನ್ಯಾಯಾಧೀಶರು ಪುರಸ್ಕರಿಸಿದ್ದು ಕುಶಾಲನಗರ ಪಟ್ಟಣ ಪಂಚಾಯಿತಿಯ ಭವಿಷ್ಯದ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ.