ಸೋಮವಾರಪೇಟೆ, ಸೆ. ೧೪: ಶಾಂತಳ್ಳಿ, ಸೋಮವಾರಪೇಟೆ ಮತ್ತು ಗೌಡಳ್ಳಿ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವ ಮತ್ತು ಮಕ್ಕಳ ಹಬ್ಬ ಸಮೀಪದ ತೋಳೂರುಶೆಟ್ಟಳ್ಳಿ-ಹರಪಳ್ಳಿಯಲ್ಲಿರುವ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವಾನಿ ಮಂಜುನಾಥ್ ಅವರು, ಶಿಕ್ಷಣದಿಂದ ಮಾತ್ರ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ. ಶೈಕ್ಷಣಿಕ ಪ್ರಗತಿಗೆ ಶಿಕ್ಷಕರೊಂದಿಗೆ ಪೋಷಕರೂ ಸಹ ಹೆಚ್ಚಿನ ಕಾಳಜಿ ವಹಿಸಬೇಕೆಂದರು. ಡಾ. ಬಿ. ಆರ್. ಅಂಬೇಡ್ಕರ್ ಅವರು ತಮ್ಮ ಜೀವನದುದ್ದಕ್ಕೂ ಹಲವಾರು ಸವಾಲುಗಳನ್ನು ಎದುರಿಸಿ ಇಡೀ ದೇಶಕ್ಕೆ ಬೆಳಕಾದರು. ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿಗಳು ಪ್ರಗತಿ ಸಾಧಿಸಬೇಕೆಂದು ಕರೆ ನೀಡಿದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಪ್ರೇಮ ಅವರು, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲೆಯ ಪ್ರಾಂಶುಪಾಲ ಚಂದ್ರಶೇಖರ ರೆಡ್ಡಿ ಅವರು ಕಾರ್ಯಕ್ರಮದ ಉದ್ದೇಶದ ಕುರಿತು ಮಾಹಿತಿ ನೀಡಿದರು. ಸಮಾಜ ವಿಜ್ಞಾನ ಶಿಕ್ಷಕರಾದ ಶಬರಿಗಿರೀಶ್, ಶಿಕ್ಷಕಿ ಪೂಜಾ, ಶಭಾನ, ಕ್ಲಸ್ಟರ್ ಸಿಆರ್‌ಪಿಗಳಾದ ಪ್ರೇಮ, ಚೈತ್ರ, ದೇವರಾಜೇಗೌಡ, ಪಂಚಾಯಿತಿ ಉಪಾಧ್ಯಕ್ಷೆ ಆರತಿ ಮತ್ತು ಪೋಷಕ-ಶಿಕ್ಷಕ ಪರಿಷತ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆದವು.