ಬೆಂಗಳೂರು, ಸೆ. ೨೪: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬAಧಿಸಿದAತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವಿದೆ ಎಂದು ಆರೋಪಿಸಿ ಅವರ ವಿರುದ್ಧ ಆರ್ಟಿಐ ಕಾರ್ಯಕರ್ತ ಟಿ.ಜೆ. ಅಬ್ರಹಂ ಅವರು ರಾಜ್ಯಪಾಲರಿಗೆ ಮೊದಲು ದೂರು ನೀಡಿದ್ದರು. ಈ ದೂರಿಗೆ ಪೂರಕವಾಗಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹಾಗೂ ಮತ್ತೊಬ್ಬರು ಎಸ್.ಪಿ. ಪ್ರದೀಪ್ ಕುಮಾರ್ ಎಂಬವರುಗಳೂ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು. ದೂರು ಸ್ವೀಕರಿಸಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಭ್ರಷ್ಟಾಚಾರ ತಡೆ ಕಾಯಿದೆ, ಭಾರತೀಯ ನ್ಯಾಯ ಸಂಹಿತೆ ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಕಾಯ್ದೆಗಳಡಿ ಸಿಎಂ ವಿರುದ್ಧ ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದರು. ಮುಡಾದಿಂದ ಕಾನೂನು ಬದ್ಧವಾಗಿಯೇ ನಿವೇಶನ ಪಡೆದಿರುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡರೂ ಕೂಡ ಅವರ ಪತ್ನಿಗೆ ಹಂಚಿಕೆಯಾದ ನಿವೇಶನಗಳಲ್ಲಿ ಕಾನೂನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿತ್ತು.
ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟ್ನ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆಯನ್ನು ಕೆಲ ದಿನಗಳ ಹಿಂದೆಯೆ ನಡೆಸಿದ್ದ ನ್ಯಾಯಾಲಯ ವಾದ-ಪ್ರತಿವಾದಗಳನ್ನು ಆಲಿಸಿ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಮಧ್ಯಾಹ್ನ ೧೨.೦೭ಕ್ಕೆ ಪ್ರಕಟಿಸಿತು. ತೀರ್ಪಿನ ಅಂತಿಮ ಖಂಡಿಕೆಯ ನಿರ್ಧಾರಕ ವಾಕ್ಯಗಳನ್ನು ಮುಕ್ತ ನ್ಯಾಯಾಲಯದಲ್ಲಿ ಉಲ್ಲೇಖಿಸುವ ಮುನ್ನ `ನಿಶ್ಯಬ್ದ' ಎಂದು ಎಲ್ಲರಿಗೂ ಎಚ್ಚರಿಸಿ ಗಟ್ಟಿಯಾಗಿ ಓದಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ಕಲಂ ೧೭ ಎ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ ಎಂದರು. ರಾಜ್ಯಪಾಲರು ತಮ್ಮ ವಿವೇಚನೆ ಬಳಸಿ ಸೂಕ್ತ ತೀರ್ಮಾನವನ್ನೇ ಕೈಗೊಂಡಿದ್ದಾರೆ. ಹಾಗಾಗಿ ಅರ್ಜಿದಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಈ ಅರ್ಜಿಯನ್ನು ವಜಾ ಮಾಡಲಾಗುತ್ತಿದೆ' ಎಂದರು. ಇದೇ ವೇಳೆ ಸಿದ್ದರಾಮಯ್ಯ ಪರ ಸುಪ್ರೀಂ ಕೋರ್ಟ್ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ತೀರ್ಪಿನ ಅನುಷ್ಠಾನಕ್ಕೆ ತಾತ್ಕಾಲಿಕ ತಡೆ ನೀಡಲು ನ್ಯಾಯಪೀಠಕ್ಕೆ ಮನವಿ ಮಾಡಿದರು. ಆದರೆ, ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳು, ಮುಖ್ಯಮಂತ್ರಿಗಳ ಕುಟುಂಬದ ಸದಸ್ಯರು ಈ ಪ್ರಕರಣದಲ್ಲಿ ಫಲಾನುಭವಿಗಳಾಗಿದ್ದಾರೆ. ಹೀಗಾಗಿ, ರಾಜ್ಯಪಾಲರ ಕ್ರಮ ಸೂಕ್ತವಾಗಿದೆ ಎಂದು ತಿಳಿಸಿದರು.
ಈ ತೀರ್ಪಿನಿಂದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿರುವ ಸಿದ್ದರಾಮಯ್ಯ ವಿರುದ್ಧದ ಖಾಸಗಿ ದೂರಿಗೆ ಸಂಬAಧಿಸಿದ ವಿಚಾರಣೆಯ ನ್ಯಾಯಿಕ ಪ್ರಕ್ರಿಯೆಗೆ ಇದ್ದ ಮಧ್ಯಂತರ ತಡೆ ಆದೇಶ ತೆರವುಗೊಂಡಿದ್ದು ಮುಂದಿನ ಕಾನೂನು ಪ್ರಕ್ರಿಯೆಗೆ ಚಾಲನೆ ಸಿಕ್ಕಂತಾಗಿದೆ.ತಜ್ಞರೊAದಿಗೆ ಸಮಾಲೋಚಿಸಿ ಮುಂದಿನ ಹೆಜ್ಜೆ - ಸಿಎಂ
ಹೈಕೋರ್ಡ್ ತೀರ್ಪಿನ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸಿ ಮುಂದಿನ ಹೆಜ್ಜೆ ಇಡುವುದಾಗಿ ಹೇಳಿದರು. ನ್ಯಾಯಾಲಯವು ಸೆಕ್ಷನ್ ೨೧೮ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ ೧೭ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ. ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ ೨೧೮ ಬಿಎನ್ಎಸ್ಎಸ್, ೧೭ಎ ಮತ್ತು ೧೯ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ ೧೯ ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ ನಿರಾಕರಿಸಿದ್ದರು. ಈ ದಿನ ನ್ಯಾಯಾಲಯ ರಾಜ್ಯಪಾಲರು ೨೧೮ ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು ೧೭ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ತನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ, ಬಿಜೆಪಿ, ಜೆಡಿಎಸ್ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ
(ಮೊದಲ ಪುಟದಿಂದ) ಮುಂದುವರಿಯಲಿದೆ ತಾನು ಯಾವುದೇ ಕಾರಣಕ್ಕೂ ರಾಜಿನಾಮೆ ನೀಡಲಾರೆ ಎಂದು ಗುಡುಗಿದರು. ನಮ್ಮ ಪಕ್ಷದ ಎಲ್ಲಾ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವAತೆ ಉತ್ತೇಜನ ನೀಡಿದ್ದಾರೆ. ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ನನ್ನ ೪೦ ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ಮನವಿ ಮಾಡುತ್ತೇನೆ. ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ ಎಂದು ದೂರಿದರು. ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ. ಇಂದು ನನ್ನ ವಿರುದ್ಧ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ ೧೩೬ ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ ಎಂದು ಸಿಎಂ ಆರೋಪಿಸಿದರು. ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಿರಾಸೆ ಅನುಭವಿಸುವುದು ಖಂಡಿತ ಎಂದು ಗುಡುಗಿದರು.