ಸಿದ್ದಾಪುರ, ಸೆ. ೨೫: ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಹಮ್ಮಿಕೊಳ್ಳಲಾಯಿತು. ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಗೊಳಪಡುವ ಚಾಮಿಯಾಲ. ಮೈತಾಡಿ. ಹಾಲುಗುಂದ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡುಬಿಟ್ಟು ದಾಂದಲೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬೆಳಗ್ಗಿನಿಂದಲೇ ಕಾರ್ಯಾಚರಣೆ ನಡೆಸಿದರು.

ಈ ಸಂದರ್ಭ ಮರಿ ಆನೆಗಳು ಸೇರಿದಂತೆ ಆರಕ್ಕೂ ಅಧಿಕ ಕಾಡಾನೆಗಳು ಕಂಡುಬAದವು ಎಂದು ವಲಯ ಅರಣ್ಯ ಅಧಿಕಾರಿ ಶಿವರಾಮ್ ತಿಳಿಸಿದರು. ಕಾರ್ಯಾಚರಣೆ ಮಾಡುವ ಸಂದರ್ಭದಲ್ಲಿ ಗುಂಪಿನಲ್ಲಿದ್ದ ಕಾಡಾನೆಗಳು ಬೇರ್ಪಟ್ಟು ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಸುತ್ತಾಡುತ್ತ ಕಾಫಿ ತೋಟಗಳಿಂದ ಕಾಡಿಗೆ ತೆರಳಲು ಹಿಂದೇಟು ಹಾಕುತ್ತಿದ್ದವು ಎಂದು ಕಾರ್ಯಾಚರಣೆ ತಂಡದ ಸಿಬ್ಬಂದಿಗಳು ತಿಳಿಸಿದ್ದಾರೆ. ಆದರೂ ಕೂಡ ತುಂತುರು ಮಳೆಯ ನಡುವೆ ಕಾಫಿ ತೋಟದೊಳಗೆ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟಲು ಶ್ರಮಪಟ್ಟರು. ಕೆಲವು ಕಾಡಾನೆಗಳು ಮಾತ್ರ ಕಾಡಿಗೆ ತೆರಳಿದ್ದು, ಉಳಿದ ಕಾಡಾನೆಗಳು ಕಾಫಿ ತೋಟಗಳಲ್ಲಿ ಉಳಿದುಕೊಂಡಿವೆ. ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಲಗ್ಗೆ ಇಟ್ಟಿದ್ದ ಕಾಡಾನೆಗಳು ಕಾಡಿನತ್ತ ತೆರಳದೆ ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಸುತ್ತಾಡಿಸುತ್ತಾ ಕಾರ್ಯಾಚರಣೆ ತಂಡವನ್ನು ಸುಸ್ತು ಬರಿಸಿತು.

ವೀರಾಜಪೇಟೆ ತಾಲೂಕು ವಿಭಾಗದ ಉಪ ಸಂರಕ್ಷಣಾಧಿಕಾರಿ ಜಗನ್ನಾಥ್ ಹಾಗೂ ಎಸಿಎಫ್ ಗೋಪಾಲ್ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾರ್ಯಾಚರಣೆ ಮುಂದುವರಿಸಲು ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ.