ಸೋಮವಾರಪೇಟೆ, ಸೆ. ೨೫: ಅಭಿವೃದ್ಧಿ ಕಾರ್ಯಗಳೊಂದಿಗೆ ಪಕ್ಷ ಸಂಘಟನೆಯೂ ಮುಖ್ಯ. ಸಂಘಟನೆಯಿAದ ಮಾತ್ರ ಚುನಾವಣೆಗಳಲ್ಲಿ ಗೆಲುವು ಸಾಧ್ಯ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವ ಕಾರ್ಯದಲ್ಲಿ ಮುಖಂಡರು, ಕಾರ್ಯಕರ್ತರು ತೊಡಗಬೇಕು ಎಂದು ಶಾಸಕ ಡಾ. ಮಂತರ್ ಗೌಡ ಅವರು ಕರೆ ನೀಡಿದರು.
ಇಲ್ಲಿನ ಮಹಿಳಾ ಸಮಾಜ ಸಭಾಂಗಣದಲ್ಲಿ ಆಯೋಜಿಸಿದ್ದ ನಗರ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸೋಮವಾರಪೇಟೆ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ. ಜನಸಂಖ್ಯೆ ಹಾಗೂ ಭೌಗೋಳಿಕತೆಯನ್ನು ನೋಡಿಕೊಂಡು ವರದಿ ತಯಾರಿಸಬೇಕಿದೆ ಎಂದ ಅವರು, ಸುಮಾರು ೧೨ ಕೋಟಿ ವೆಚ್ಚದಲ್ಲಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಅಮೃತ್-೨ ಯೋಜನೆ ಪ್ರಗತಿಯಲ್ಲಿದ್ದು, ಕಾರ್ಯಕರ್ತರು ಯೋಜನೆಯ ಉದ್ದೇಶಗಳನ್ನು ತಿಳಿದುಕೊಂಡು, ಪ್ರತಿ ಮನೆಗೂ ಸೌಲಭ್ಯ ಲಭಿಸುವಂತೆ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ನಗರ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಮಂಜುನಾಥ್ ಸೇರಿದಂತೆ ಸಮಿತಿ ಪದಾಧಿಕಾರಿಗಳಿಗೆ ಕಾಂಗ್ರೆಸ್ ಧ್ವಜ ಹಸ್ತಾಂತರ ಮಾಡುವ ಮೂಲಕ ಅಧಿಕಾರ ವಹಿಸಲಾಯಿತು.
ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಶಫಿ, ಕಾರ್ಯಾಧ್ಯಕ್ಷರಾಗಿ ಭುವನೇಶ್, ಸಹ ಕಾರ್ಯದರ್ಶಿಯಾಗಿ ಎಂ.ಎ. ರುಬೀನ, ಉಪಾಧ್ಯಕ್ಷರಾಗಿ ಜಮೀರ್, ಮೀನಾಕುಮಾರಿ ಸೇರಿದಂತೆ ಇತರ ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಲಾಯಿತು.
ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಜಿಲ್ಲಾ ಉಪಾಧ್ಯಕ್ಷ ಕೆ.ಎಂ. ಲೋಕೇಶ್, ಕೆಡಿಪಿ ಸದಸ್ಯ ಹೆಚ್.ಆರ್. ಸುರೇಶ್, ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಈ. ಜಯೇಂದ್ರ, ಸೋಮವಾರಪೇಟೆ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎ. ಆದಂ, ಪ.ಪಂ. ಸದಸ್ಯರಾದ ಬಿ.ಸಿ. ವೆಂಕಟೇಶ್, ಬಿ. ಸಂಜೀವ, ಪ್ರಮುಖರಾದ ಹೆಚ್.ಸಿ. ನಾಗೇಶ್, ಬಸವರಾಜು, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕೆ.ಜೆ. ಸುನಿಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.