ಸೋಮವಾರಪೇಟೆ, ಸೆ. ೨೬: ನಾವು ಗಳಿಸಿದ ಆದಾಯ ಅಥವಾ ನಮ್ಮಲ್ಲಿರುವ ಸಂಪತ್ತಿನಲ್ಲಿ ಸ್ವಲ್ಪ ಭಾಗವನ್ನಾದರೂ ಸಮಾಜ ಸೇವೆಗೆ ಮುಡಿಪಾಗಿಟ್ಟರೆ ಜೀವನದಲ್ಲಿ ಸಾರ್ಥಕತೆ ಕಾಣಬಹುದು ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.
ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಅಕ್ಷರ ದಾಸೋಹ ಮಧ್ಯಾಹ್ನ ಉಪಾಹಾರ ಯೋಜನೆಯಡಿ ಅಜೀಂ ಪ್ರೇಮ್ ಜೀ ಫೌಂಡೇಶನ್ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು ಪ್ರಾರಂಭಿಸಲಾದ ನೂತನ ಯೋಜನೆಯಾದ ವಾರದ ಆರು ದಿನಗಳ ಪೂರಕ ಪೌಷ್ಟಿಕ ಆಹಾರವನ್ನು ವಿತರಿಸುವ ಕಾರ್ಯಕ್ರಮಕ್ಕೆ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಶಿಕ್ಷಣ ಮತ್ತು ಆರೋಗ್ಯದೊಂದಿಗೆ ಪೌಷ್ಟಿಕ ಆಹಾರವನ್ನು ಪೂರೈಸಲು ರಾಜ್ಯ ಸರಕಾರ ಮುಂದಾಗಿರುವುದು ಸ್ವಾಗತಾರ್ಹ ಕ್ರಮ. ಇದರೊಂದಿಗೆ ಶಿಕ್ಷಣ ಇಲಾಖೆಯ ಉನ್ನತಿಗಾಗಿ ಇಲಾಖೆ ಸಚಿವ ಮಧು ಬಂಗಾರಪ್ಪ ಇನ್ನಷ್ಟೂ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡಿದ್ದಾರೆ. ಶಿಕ್ಷಕರು ಶಾಲಾ ಮಕ್ಕಳಿಗೆ ಅಜೀಂ ಪ್ರೇಮ್ ಜೀ ಅವರ ಸಾಧನೆಗಳ ಕುರಿತು ತಿಳಿ ಹೇಳಬೇಕೆಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ಕುಮಾರ್ ಮಾತನಾಡಿ, ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಅವಶ್ಯವಿರುವ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಒದಗಿಸಿಕೊಡಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೌಡ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನತೀಶ್ ಮಂದಣ್ಣ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ಸಿ.ಬಿ. ಸುರೇಶ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಕ್ಷೇತ್ರ ಸಮನ್ವಯಾಧಿಕಾರಿ ಮಂಜೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕಾಳನಾಯಕ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಯಶೋಧ ಮತ್ತಿತರರು ಇದ್ದರು.