ಮಡಿಕೇರಿ, ಸೆ. ೨೮ : ಕೊಡಗು ಜಿಲ್ಲೆಯಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಮಾಡುವ ಜಾಲವನ್ನು ಹೆಡೆಮುರಿಕಟ್ಟುವಲ್ಲಿ ಕೊಡಗು ಜಿಲ್ಲಾ ಪೊಲೀಸರು ತಲ್ಲೀನರಾಗಿದ್ದು, ಸಾಕಷ್ಟು ಅಂತಹ ಪ್ರಕರಣಗಳನ್ನು ಬಯಲಿಗೆಳೆದು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯನ್ನು ಮುಂದುವರಿಸಿರುವ ಪೊಲೀಸರು ಇದೀಗ ಭಾರೀ ದೊಡ್ಡ ಜಾಲವೊಂದನ್ನು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ.
ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಮಾಡುವ ಜಾಲವನ್ನು ಭೇದಿಸಲು ಪಣತೊಟ್ಟಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಬೃಹತ್ ಜಾಲವೊಂದನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿದೇಶದಿಂದ ಮಾದಕ ವಸ್ತುಗಳನ್ನು ತಂದು ಜಿಲ್ಲೆಯಲ್ಲಿ ಮಾರಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿರುವ ಪೊಲೀಸರ ತಂಡ ಕೋಟಿಗಟ್ಟಲೆ ಬೆಲೆ ಬಾಳುವ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಈ ಸಂಬAಧ ಮಾರಾಟದಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಿರುವ ಬಗ್ಗೆ ತಿಳಿದು ಬಂದಿದೆ.
ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳು ಭಾಗಿಯಾಗಿರುವ ಬಗ್ಗೆ ದೊರೆತ ಸುಳಿವಿನ ಮೇರೆಗೆ ಕಾರ್ಯಾಚರಣೆ ಮುಂದುವರೆದಿದೆ. ? ಸಂತೋಷ್