ಕೂಡಿಗೆ, ಸೆ. ೩೦: ಕೂಡಿಗೆಯಲ್ಲಿರುವ ಸರಕಾರಿ ಕ್ರೀಡಾ ಪ್ರೌಢಶಾಲೆಯಲ್ಲಿ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ೩೦ ಲಕ್ಷ ವೆಚ್ಚದಲ್ಲಿ ಕ್ರೀಡಾ ಶಾಲಾ ಆವರಣದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಪರಿಶೀಲನೆ ನಡೆಸಿದರು. ನಂತರ ಶಾಸಕರು ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ವಸತಿ ಗೃಹದಲ್ಲಿ ಬಿಸಿ ನೀರಿನ ಸಮಸ್ಯೆಯ ಮಾಹಿತಿಯನ್ನು ಪಡೆದ ಶಾಸಕರು ಒಂದೆರಡು ದಿನಗಳಲ್ಲಿ ಸರಿ ಪಡಿಸುವಂತೆ ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚನೆ ಮತ್ತು ಕಾಮಗಾರಿಯನ್ನು ವ್ಯವಸ್ಥಿತವಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಾರ್ಯ ನಿರ್ವಹಣೆಯನ್ನು ನೋಡಿಕೊಳ್ಳುವಂತೆ ಅಧಿಕಾರಿಗೆ ಸೂಚನೆ ನೀಡಿದರು.
ಈ ಸಂದರ್ಭ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ಚಕ್ರವರ್ತಿ, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಟಿ.ಪಿ. ಹಮೀದ್ ಸೇರಿದಂತೆ ಇನ್ನಿತರರು ಹಾಜರಿದ್ದರು.