ಮಡಿಕೇರಿ, ಸೆ. ೨೯: ಬಡವರಿಗೂ ಕೂಡ ದುಬಾರಿ ವೆಚ್ಚದ ಚಿಕಿತ್ಸೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆರೋಗ್ಯ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ. ಶರಣ ಪ್ರಕಾಶ ಆರ್. ಪಾಟೀಲ ಹೇಳಿದರು.

ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕಾö್ಯನಿಂಗ್ ಸೇವೆಗೆ ಚಾಲನೆ ನೀಡಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೊಡಗು ವಿಶೇಷ ಜಿಲ್ಲೆಯಾಗಿದ್ದು, ಇಲ್ಲಿಗೆ ಹೆಚ್ಚಿನ ಸೌಲಭ್ಯಗಳು ನೀಡಬೇಕಾದ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮಕೈಗೊಳ್ಳಲಾಗುವುದು. ಹಾಸ್ಟೆಲ್ ಸೇರಿದಂತೆ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೂ ಪ್ರಯತ್ನಿಸಲಾಗುವುದು ಎಂದು ಸಚಿವರು ಭರವಸೆಯಿತ್ತರು.

ಬಡವರಿಗೆ ಗುಣಮಟ್ಟದ ಚಿಕಿತ್ಸೆ ಲಭಿಸಬೇಕೆಂಬ ಉದ್ದೇಶದಿಂದ ಸರ್ಕಾರ ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜನ್ನು ನಿರ್ಮಾಣ ಮಾಡಿದೆ. ಇದರಿಂದಾಗಿ ಬಡಜನತೆಗೆ ಉತ್ತಮ ಚಿಕಿತ್ಸೆ ದೊರೆಯುವುದರೊಂದಿಗೆ ಬಡವರ್ಗದ ಪ್ರತಿಭಾವಂತ ಮಕ್ಕಳು ಕೂಡ ವೈದ್ಯರಾಗಲು ಸಹಕಾರಿಯಾಗಿದೆ ಎಂದು ಶರಣ ಪ್ರಕಾಶ ಪಾಟೀಲ ನುಡಿದರು.

ಜಿಲ್ಲಾಸ್ಪತ್ರೆಯ ನೂತನ ಆಸ್ಪತ್ರೆ ಕಟ್ಟಡದ ಮುಂದುವರಿದ ಕಾಮಗಾರಿಗೆ ರೂ. ೬೦ ಕೋಟಿ ಅನುದಾನದ ಬೇಡಿಕೆಯಿದ್ದು, ಅದನ್ನು ಒದಗಿಸಲು ಕ್ರಮಕೈಗೊಳ್ಳಲಾಗುವುದು. ಹೃದ್ರೋಗ ಘಟಕ ಸ್ಥಾಪನೆಗೆ ಕ್ರಮವಹಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವರು ಆಶ್ವಾಸನೆಯಿತ್ತರು. ಕೊಡಗಿನ ಇಬ್ಬರೂ ಯುವ ಶಾಸಕರು ಕೊಡಗಿನ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದು, ಸರ್ಕಾರ ಕೂಡ ಅಭಿವೃದ್ಧಿ ನಿಟ್ಟಿನಲ್ಲಿ ಸೂಕ್ತ ಸ್ಪಂದನ ನೀಡಲಿದೆ ಎಂದು ಅವರು ನುಡಿದರು.

ಮುಖ್ಯ ಅತಿಥಿಯಾಗಿದ್ದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ ಮಾತನಾಡಿ, ವೈದ್ಯಕೀಯ ಶಿಕ್ಷಣ ಕ್ಷೇತ್ರ ಹಾಗೂ ಆರೋಗ್ಯ ಕ್ಷೇತ್ರವನ್ನು ಅಭಿವೃದ್ಧಿಪಡಿಸಬೇಕು ಎಂಬ ಉದ್ದೇಶದಿಂದ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಸಿನ್ ಮಾತನಾಡಿ, ಎಂಆರ್‌ಐ ಯಂತ್ರ ಸದುಪಯೋಗವಾಗುವುದರೊಂದಿಗೆ ಜನತೆಗೆ ಉತ್ತಮ ಆರೋಗ್ಯ ಸೇವೆ ಸಿಗುವಂತಾಗಬೇಕು. ಕೊಡಗಿನ ಜಿಲ್ಲಾಸ್ಪತ್ರೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಹಂತ ಹಂತವಾಗಿ ಅಭಿವೃದ್ಧಿ ಮಾಡಲು ಇಲಾಖೆ ಬದ್ಧವಾಗಿದೆ ಎಂದು ನುಡಿದರು. ೩ಐದನೇ ಪುಟಕ್ಕೆ

(ಮೊದಲ ಪುಟದಿಂದ) ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಮಾತನಾಡಿ, ಎಂಆರ್‌ಐ ಯಂತ್ರ ಬಹುದಿನದ ಬೇಡಿಕೆಯಾಗಿದ್ದು, ಇದೀಗ ಬೇಡಿಕೆ ಈಡೇರಿದೆ. ಇದು ಸದ್ಭಳಕೆಯಾಗಬೇಕು. ಜಿಲ್ಲಾಸ್ಪತೆಯಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ಸಿಗುವಂತಾಗಬೇಕು ಎಂದು ಹೇಳಿದರು. ಎಂಆರ್‌ಐ ಯಂತ್ರ ಕೊಡಗಿಗೆ ಅವಶ್ಯಕತೆ ಇದೆ ಎಂಬ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಗಮನ ಸೆಳೆದು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ೧೦ ಕೋಟಿ ೭೦ ಲಕ್ಷ ವೆಚ್ಚದ ಯಂತ್ರವನ್ನು ಇಲಾಖೆ ಒದಗಿಸಿದೆ ಎಂದು ನುಡಿದರು. ವೇದಿಕೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಉಪಸ್ಥಿತರಿದ್ದರು. ಇದೇ ಸಂದರ್ಭ ಸಚಿವರು, ಶಾಸಕದ್ವಯರು, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರನ್ನು ಮೆಡಿಕಲ್ ಕಾಲೇಜಿನ ಟೀರ‍್ಸ್ ಅಸೋಸಿಯೇಷನ್ ಹಾಗೂ ಪಿಜಿ ವಿದ್ಯಾರ್ಥಿಗಳ ಸಂಘದಿAದ ಸನ್ಮಾನಿಸಿ ಗೌರವಿಸಲಾಯಿತು. ಮೆಡಿಕಲ್ ಕಾಲೇಜಿನ ಡೀನ್ ನಿರ್ದೇಶಕರಾದ ಡಾ. ವಿಶಾಲ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಎಂಆರ್‌ಐ ಯಂತ್ರದಿAದ ಗಂಭೀರವಾದ ಕಾಯಿಲೆಗಳನ್ನು ಶೀಘ್ರ ಪತ್ತೆಹಚ್ಚಲು ಅನುಕೂಲವಾಗಲಿದೆ ಎಂದು ಹೇಳಿದರು. ಲೋವಿಸ್ ನಿರೂಪಿಸಿ, ಚಿತ್ರಾವತಿ ಪ್ರಾರ್ಥಿಸಿದರು. ಮೆಡಿಕಲ್ ಕಾಲೇಜಿನ ವೈದ್ಯಕೀಯ ಅಧೀಕ್ಷಕರಾದ ಡಾ. ಹೆಚ್.ಕೆ. ಸೋಮಶೇಖರ್ ವಂದಿಸಿದರು.