ಗೋಣಿಕೊಪ್ಪ, ಅ. ೨: ಶಾಲಾ ಮಕ್ಕಳಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸಲು ಸರ್ಕಾರ ನಾನಾ ರೀತಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ವಾರದಲ್ಲಿ ಸರ್ಕಾರದ ವತಿಯಿಂದ ೨ ದಿನಕ್ಕೆ ಮೀಸಲಿಟ್ಟಿದ್ದ ಮೊಟ್ಟೆ ವಿತರಣೆಯು ಇದೀಗ ಬೆಂಗಳೂರಿನ ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಕಾರದಿಂದ ವಾರದ ಆರು ದಿನಗಳಲ್ಲಿ ಮಕ್ಕಳಿಗೆ ಉಚಿತವಾಗಿ ಮೊಟ್ಟೆ ವಿತರಣೆ ಕಾರ್ಯಕ್ರಮವು ನಡೆಯುತ್ತಿದೆ.
ಈ ಯೋಜನೆಯ ಪ್ರಯೋಜನವನ್ನು ಪ್ರತಿ ವಿದ್ಯಾರ್ಥಿಯೂ ಸದ್ಭಬಳಕೆ ಮಾಡಿಕೊಳ್ಳುವಂತೆ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಮೂರು ವರ್ಷಕ್ಕೆ ಈ ಕಾರ್ಯಕ್ರಮವು ಮುಂದುವರೆಯಲಿದೆ.
ಶಾಲಾ ಮಕ್ಕಳು ಪ್ರತಿ ದಿನ ಶಾಲೆಯಲ್ಲಿ ನೀಡುವ ಉಚಿತ ಮೊಟ್ಟೆಯನ್ನು ಬಳಕೆ ಮಾಡು ವುದರಿಂದ ತಮ್ಮ ಆರೋಗ್ಯವನ್ನು ವೃದ್ದಿಸಿಕೊಳ್ಳಬಹುದು.
ಮೊಟ್ಟೆಯಲ್ಲಿ ಉತ್ತಮ ಪೌಷ್ಟಿಕಾಂಶ ಇರುವುದರಿಂದ ವಿದ್ಯಾರ್ಥಿಗಳು ಇದನ್ನು ಬಳಕೆ ಮಾಡಿಕೊಂಡು ಸೇವಿಸುವಂತಾಗ ಬೇಕು. ಇದರಿಂದ ದೇಹದ ಬೆಳವಣಿಗೆಗೂ ಅನುಕೂಲವಾಗಲಿದೆ ಎಂದರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷೆ ಕೆ.ಆರ್. ಶಾಂತಿ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಕೆ.ಆರ್. ಬಿಂದು ಕಾರ್ಯಕ್ರಮದ ಉದ್ದೇಶ ಗಳನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಅಕ್ಷರ ದಾಸೋಹ ಅಧಿಕಾರಿಗಳಾದ ಕೆ.ಆರ್. ರಾಜೇಶ್ ಮಾತನಾಡಿ, ಮಕ್ಕಳು ಅಪೌಷ್ಟಿಕತೆಯಿಂದ ಬಳಲುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಯೋಜನೆ ಅನುಷ್ಠಾನಗೊಳಿಸಿದೆ ಎಂದರು.
ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಕೆ. ಕುಮಾರ್ ಮಾತನಾಡಿ, ತಾಲೂಕು ಮಟ್ಟದ ಕಾರ್ಯಕ್ರಮವು ನಮ್ಮ ಶಾಲೆಯಲ್ಲಿ ನಡೆಯುತ್ತಿರುವುದು ಶ್ಲಾಘನೀಯ.
ಮೊಟ್ಟೆಯೊಂದಿಗೆ ಸರ್ಕಾರದ ವಿವಿಧ ಯೋಜನೆಗಳು ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ತಲುಪುತ್ತಿವೆ. ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಹೆಚ್ಚಳವಾಗಲು ಇಂತಹ ಯೋಜನೆಗಳು ಸಹಕಾರಿ ಯಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪ ಗ್ರಾ.ಪಂ. ಉಪಾಧ್ಯಕ್ಷೆ ಎಂ. ಮಂಜುಳ, ಸದಸ್ಯೆ ಕೊಣಿಯಂಡ ಬೋಜಮ್ಮ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಕವಿತ, ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೃಷ್ಣ ಚೈತನ್ಯ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ್, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್. ತಮ್ಮಯ್ಯ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಪಿ. ಮಹೇಶ್, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಇ. ಸುರೇಂದ್ರ ಅನುದಾನಿತ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಗಿಡ್ಡಯ್ಯ, ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಿದ್ದರು.
ಮುಖ್ಯ ಶಿಕ್ಷಕ ಹೆಚ್.ಕೆ. ಕುಮಾರ್ ಸ್ವಾಗತಿಸಿ, ಚಿತ್ರಕಲಾ ಶಿಕ್ಷಕರಾದ ಸತೀಶ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ರಮಾನಂದ, ನಿರ್ಮಲ, ದಮಯಂತಿ, ಜಯಶ್ರೀ, ಅನಿತಾ ಕುಮಾರಿ, ಜೋಸ್ಲಿಯ, ಇಂದಿರಾ, ಶಾರದ, ನಾಗರಾಜ, ಸ್ನೇಹ ಕಾವೇರಮ್ಮ, ಸಿದ್ದರಾಜು, ಉಪಸ್ಥಿತರಿದ್ದರು.