ಮಡಿಕೇರಿ,ಅ.೪: ರಾಜ್ಯದ ವಿಶ್ವ ವಿದ್ಯಾನಿಲಯಗಳಲ್ಲಿ ಶೈಕ್ಷಣಿಕ ಹಾಗೂ ಮೂಲಭೂತ ಸೌಕರ್ಯ ಒದಗಿಸು ವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಜ.ತಿಮ್ಮಯ್ಯ ವೃತ್ತದಲ್ಲಿ ಎಬಿವಿಪಿ ಪ್ರಮುಖರಾದ ಕೌಶಲ್ಯ ನೇತೃತ್ವದಲ್ಲಿ ಜಮಾವಣೆಗೊಂಡ ಫೀ.ಮಾ.ಕಾರ್ಯಪ್ಪ ಕಾಲೇಜಿನ ಶೇ. ೩೦ರಷ್ಟು ಮಂದಿ ವಿದ್ಯಾರ್ಥಿನಿಯರು ರಾಜ್ಯದ ಸರಕಾರಿ ವಿವಿಗಳಲ್ಲಿ ಹಾಗೂ ವಿವಿ ವ್ಯಾಪ್ತಿಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಮರ್ಪಕ ಬೋಧಕ ವರ್ಗವಿಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ, ರಾಜ್ಯದ ೪೬೦ಕ್ಕೂ ಅಧಿಕ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಲ್ಲದೆ ಸಮಸ್ಯೆ ತಲೆದೋರಿದೆ. ಕೂಡಲೇ ಸರಕಾರ ಈ ಸಮಸ್ಯೆಯನ್ನು ಪರಿಹರಿಸಿ ವಿದ್ಯಾರ್ಥಿಗಳ ನೆರವಿಗೆ ಬರಬೇಕೆಂದು ಆಗ್ರಹಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.