ನಾಪೋಕ್ಲು, ಅ. ೪: ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೊಂಗೇರ ಶಿಲ್ಪಾ ಲೋಕೇಶ್ ಅಧ್ಯಕ್ಷತೆಯಲ್ಲಿ ನೋಡೆಲ್ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಅವರ ಸಮ್ಮುಖದಲ್ಲಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಕಕ್ಕಬೆಯ ವಿಎಸ್ಎಸ್ಎನ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಜೆಎಮ್ ಕಾಮಗಾರಿಯು ಪ್ರಾರಂಭಿಸಿ ಮೂರು ವರ್ಷ ಆದರು ಪೂರ್ಣವಾಗದ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆಗಳು ತುಂಬಾ ಹದಗೆಟ್ಟಿದ್ದು ರಸ್ತೆಗಳನ್ನು ಸರಿಪಡಿಸಲು ಮತ್ತು ರಸ್ತೆಯ ಬದಿಯ ಚರಂಡಿಯನ್ನು ಸರಿಪಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ಯವಕಪಾಡಿ ಗ್ರಾಮದ ಸರ್ವೆ ನಂಬರ್ ೨೫೦/೯ ಮತ್ತು ೨೫೪ರ ಸರ್ಕಾರಿ ಜಾಗದಲ್ಲಿ ಇದ್ದ ಒತ್ತುವರಿಯನ್ನು ಯಾವುದೇ ಕಾರಣಕ್ಕೂ ಮೀಸಲು ಅರಣ್ಯಕ್ಕೆ ಸೇರಿಸಬಾರದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು, ಹಾಗೂ ಮನೆಗಳನ್ನು ನಿರ್ಮಿಸಿಕೊಂಡಿರುವ ಹಾಗೂ ತೋಟಗಳನ್ನು ಮಾಡಿರುವಂತಹ ಜಾಗವನ್ನು ಯಾವುದೇ ಕಾರಣಕ್ಕೂ ಮೀಸಲು ಅರಣ್ಯಕ್ಕೆ ಬಿಟ್ಟು ಕೊಡುವುದಿಲ್ಲ ಎಂದು ಗ್ರಾಮಸ್ಥರು ಹೇಳಿದರು. ಸಭೆಗೆ ಇಲಾಖಾ ಅಧಿಕಾರಿಗಳು ಹಾಜರಾಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.