ಮಡಿಕೇರಿ, ಅ. ೧೮ : ಮಡಿಕೇರಿ ದಸರಾ ಯಶಸ್ಸಿಗೆ ಸಹಕರಿಸಿದ ಹಾಗೂ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿದ ಪೌರ ಕಾರ್ಮಿಕರಿಗೆ ಆತ್ಮೀಯವಾಗಿ ತಾ. ೧೮ರಂದು ಕೃತಜ್ಞತೆ ಸಲ್ಲಿಸಲಾಯಿತು.
ಮಡಿಕೇರಿ ನಗರ ದಸರಾ ಸಮಿತಿಯ ಕೆಲ ಪದಾಧಿಕಾರಿಗಳು ವೈಯಕ್ತಿಕವಾಗಿ ನಗರದ ಖಾಸಗಿ ಹೊಟೇಲ್ನಲ್ಲಿ ನಡೆಸಿದ ಸರಳ ಸಮಾರಂಭದಲ್ಲಿ ಪೌರಕಾರ್ಮಿಕರಿಗೆ ಅಭಿನಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷ ವೆಂಕಟ್ ರಾಜಾ ಅವರು ಮಡಿಕೇರಿ ದಸರಾ ಯಶಸ್ಸಿಗೆ ಪೌರಕಾರ್ಮಿಕರ ಶ್ರಮ ಹೆಚ್ಚಿನದ್ದಾಗಿದೆ ಎಂದು ಶ್ಲಾಘಿಸಿದರು.
ಮಡಿಕೇರಿ ನಗರಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಹಿನ್ನೆಲೆ ಸ್ವಚ್ಛತೆಗೆ ಹೆಚ್ಚು ಒತ್ತು ನೀಡುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಪೌರಕಾರ್ಮಿಕರು ಪರಿಸರ ಶುಚಿತ್ವಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.
ಕೊಡಗು ಜಿಲ್ಲೆ ಸ್ವಚ್ಛತೆಯಲ್ಲಿ ಇಡೀ ವಿಶ್ವದಲ್ಲಿಯೇ ಮಾದರಿಯಾಗಬೇಕು ಎಂಬುದು ಪ್ರತಿಯೊಬ್ಬರ ಆಶಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.
ಮಡಿಕೇರಿ ನಗರ ಸ್ವಚ್ಛತೆಯಲ್ಲಿ ಈಗಾಗಲೇ ೧೦ನೇ ಸ್ಥಾನದಲ್ಲಿದ್ದು, ಮತ್ತಷ್ಟು ಶುಚಿತ್ವಕ್ಕೆ ಒತ್ತು ನೀಡುವಂತಾಗಬೇಕು ಎಂದು ಸಲಹೆ ಮಾಡಿದರು.
ಮಡಿಕೇರಿ ನಗರ ದಸರಾ ಸಮಿತಿ ಗೌರವ ಅಧ್ಯಕ್ಷ ಜಿ. ಚಿದ್ವಿಲಾಸ್ ಅವರು ಮಾತನಾಡಿ ಪೌರಕಾರ್ಮಿಕರು ಸ್ವಚ್ಛತೆ ಜೊತೆಗೆ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಮಡಿಕೇರಿ ನಗರದ ಪೌರಕಾರ್ಮಿಕರು ಪ್ರತಿನಿತ್ಯ ನಗುಮುಖದಿಂದ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಶ್ಲಾಘಿಸಿದ ಅವರು ಬಸವಣ್ಣನವರ ಕಾಯಕವೇ ಕೈಲಾಸ ಎಂಬAತೆ ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಾರೆ. ಪೌರಕಾರ್ಮಿಕರು ವೃತ್ತಿ ಸಂದರ್ಭದಲ್ಲಿ ಅಗತ್ಯ ಪರಿಕರಗಳನ್ನು ಬಳಸುವಂತಾಗಬೇಕು ಎಂದರು.
ಪೌರಾಯುಕ್ತ ಎಚ್.ಆರ್. ರಮೇಶ್ ಅವರು ಮಾತನಾಡಿ ಇದೇ ಮೊದಲ ಬಾರಿಗೆ ದಸರಾ ಸಮಿತಿ ಸದಸ್ಯರು ಪೌರಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿರುವುದು ವಿಶೇಷವಾಗಿದೆ ಎಂದರು.
ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಚಿ ಅರುಣ್ ಶೆಟ್ಟಿ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ., ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೆರ, ಸ್ವಾಗತ ಸಮಿತಿ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಸಾಂಸ್ಕೃತಿಕ ಸಮಿತಿ ಸದಸ್ಯರಾದ ವೀಣಾಕ್ಷಿ, ಮಿನಾಜ್ ಪ್ರವೀಣ್, ಕವನ್, ಅಭಿಯಂತರರಾದ ಸತೀಶ್, ಹೇಮಂತ್ ಕುಮಾರ್, ಸೌಮ್ಯ, ತಾಹಿರ್, ಇತರರು ಇದ್ದರು.