ಸೋಮವಾರಪೇಟೆ,ಅ.೧೮: ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆಯುವ ಸಭೆಗಳಿಗೆ ಕೆಲವು ಇಲಾಖಾಧಿಕಾರಿಗಳು ನಿರಂತರವಾಗಿ ಗೈರು ಹಾಜರಾಗುತ್ತಿದ್ದು, ಇಂತಹ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುವುದೆಂದು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಹೇಳಿದರು.
ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಹಲವಷ್ಟು ಅಧಿಕಾರಿಗಳು ಗೈರಾಗಿರುವ ಬಗ್ಗೆ ಸದಸ್ಯರುಗಳು ಅಸಮಾಧಾನ ವ್ಯಕ್ತಪಡಿಸಿ, ಕ್ರಮಕ್ಕೆ ಆಗ್ರಹಿಸಿದರು.
ಈ ಸಂದರ್ಭ ಮಾತನಾಡಿದ ತಹಶೀಲ್ದಾರ್ರು, ಸಭೆಗಳಿಗೆ ಗೈರಾಗುವ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು. ಪ್ರತಿ ಪೂರ್ವಭಾವಿ ಸಭೆಯಲ್ಲಿ ಇದೇ ರೀತಿ ಪುನರಾವರ್ತನೆಯಾದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದರು.
ಕನ್ನಡ ರಾಜ್ಯೋತ್ಸವ ದಿನದಂದು ವಿವಿಧ ಶಾಲಾ ತಂಡಗಳ ಸ್ತಬ್ದ ಚಿತ್ರಗಳು ಬೆಳಿಗ್ಗೆ ೯ಕ್ಕೆ ಜೇಸೀ ವೇದಿಕೆ ಬಳಿಯಿಂದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನಕ್ಕೆ ತೆರಳಬೇಕು. ಶಾಲಾ ಮಕ್ಕಳಿಗೆ ಕುಡಿಯುವ ನೀರು ಮತ್ತು ಲಘು ಉಪಹಾರದ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕಾಗಿದೆ ಎಂದು ತಹಶೀಲ್ದಾರ್, ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಇದೇ ಸಂದರ್ಭ ಕನ್ನಡ ನಾಡು, ನುಡಿ, ಸಾಹಿತ್ಯ ಸೇವೆಯನ್ನು ಪರಿಗಣಿಸಿ ಈರ್ವರು ಸಾಧಕರಿಗೆ ಸನ್ಮಾನ ಮಾಡಲಾಗುವುದೆಂದು ತಹಶೀಲ್ದಾರ್ ಸಭೆಗೆ ತಿಳಿಸಿದರು. ಸಭೆಯಲ್ಲಿ ತಾಲೂಕು ಕ.ಸಾ.ಪ. ಅಧ್ಯಕ್ಷ ಎಸ್.ಡಿ. ವಿಜೇತ್, ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಸದಸ್ಯರುಗಳು, ವಿವಿಧ ಇಲಾಖಾಧಿಕಾರಿಗಳು ಸಲಹೆ ಸೂಚನೆ ನೀಡಿದರು.