ಸಿದ್ದಾಪುರ, ಅ.೧೮: ಗಬ್ಬದ ಹಸುವಿನ ಮೇಲೆ ದಾಳಿ ನಡೆಸಿ ಸಾಯಿಸಿದ ಹುಲಿಯು ಕಾರ್ಯಾಚರಣೆ ಸಂದರ್ಭದಲ್ಲಿ ಪತ್ತೆಯಾಗಿದೆ. ಕಳೆದೆರಡು ದಿನಗಳ ಹಿಂದೆ ಬಾಡಗ ಬಾಣಂಗಾಲ ಗ್ರಾಮದ ನಿವಾಸಿ ಗುಡ್ಡಂಡ ಕಿಟ್ಟು ಎಂಬವರ ಕಾಫಿ ತೋಟದೊಳಗೆ ಬೀಡಾಡಿ ಗಬ್ಬದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕರುವಿನೊಂದಿಗೆ ಕೊಂದು ಅರ್ಧ ತಿಂದು ಹಾಕಿತ್ತು.

ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು ಕಾರ್ಮಿಕರು ಕೂಡ ಕೆಲಸಕ್ಕೆ ತೆರಳಲು ಹಿಂದೇಟು ಹಾಕಿದ್ದರು. ವೀರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಹಾಗೂ ಎಸಿಎಫ್ ಗೋಪಾಲ್ ಮಾರ್ಗದರ್ಶನದಲ್ಲಿ ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್ ನೇತೃತ್ವದಲ್ಲಿ ನಿನ್ನೆ ರಾತ್ರಿಯಿಂದಲೇ ಬಾಡಗ ಬಾಣಂಗಾಲ ಗ್ರಾಮ ವ್ಯಾಪ್ತಿಯಲ್ಲಿ ಉಪವಲಯ ಅರಣ್ಯ ಅಧಿಕಾರಿ ಶಶಿ ಹಾಗೂ ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.

ಇಂದು ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಮುಂದುವರಿಸಿದ ಸಂದರ್ಭದಲ್ಲಿ ಮೈಲಾಪುರದ ಕಾಫಿ ತೋಟದಲ್ಲಿ ಹುಲಿ ಪತ್ತೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಕಾರ್ಯಾಚರಣೆ ತಂಡ ಪಟಾಕಿ ಸಿಡಿಸಿದರು. ಈ ಹಿನ್ನೆಲೆ ಹುಲಿ ಕಾಫಿ ತೋಟದಿಂದ ಪರಾರಿಯಾಗಿ ಅರಣ್ಯದತ್ತ ತೆರಳಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಭಾಗದ ಕಾಫಿ ತೋಟಗಳಲ್ಲಿ ೧೫೦ಕ್ಕೂ ಅಧಿಕ ಬೀಡಾಡಿ ದನಗಳು ಸುತ್ತಾಡುತ್ತಿದ್ದು ಇವುಗಳ ಮೇಲೆ ಹುಲಿ ದಾಳಿ ನಡೆಸಿ ಆಹಾರವನ್ನಾಗಿ ಬಳಸಿಕೊಳ್ಳುತ್ತಿದೆ. ಇದರಿಂದಾಗಿ ಕಾಫಿ ತೋಟದಲ್ಲಿ ಹುಲಿಯು ಸುತ್ತಾಡುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಹುಲಿ ಮತ್ತೆ ಕಾಫಿ ತೋಟದಲ್ಲಿ ಜಾನುವಾರಗಳ ಮೇಲೆ ದಾಳಿ ನಡೆಸಿದ್ದಲ್ಲಿ ಮೇಲಾಧಿಕಾರಿಗಳ ಅನುಮತಿ ಪಡೆದು ಹುಲಿ ಸೆರೆಗೆ ಕ್ರಮ ಕೈಗೊಳ್ಳುವುದಾಗಿ ವಲಯ ಅರಣ್ಯ ಅಧಿಕಾರಿ ಗಂಗಾಧರ್ ತಿಳಿಸಿದ್ದಾರೆ. - ವಾಸು