ಗೋಣಿಕೊಪ್ಪಲು, ಅ. ೨೨: ಮುಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಅತೀ ಶೀಘ್ರವಾಗಿ ಅನುಷ್ಠಾನಗೊಳಿಸಬೇಕು ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ. ೫೦ ರಿಂದ ಶೇ. ೭೫ಕ್ಕೆ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿತು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಆರ್. ಪರಶುರಾಮ್ ಮುಂದಾಳತ್ವದಲ್ಲಿ ನಗರದ ಪಾಲಿಬೆಟ್ಟ ರಸ್ತೆಯ ಜಂಕ್ಷನ್ ಬಳಿ ಸೇರಿ ನಂತರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಸಾಗಿ, ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರು ಸಮಾಗಮಗೊಂಡರು.

ಹೋರಾಟಗಾರರನ್ನು ಉದ್ದೇಶಿಸಿ ಜಿಲ್ಲಾ ಸಂಚಾಲಕ ಹೆಚ್.ಆರ್. ಪರಶುರಾಮ್ ಮಾತನಾಡಿ, ಸರ್ಕಾರವು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ಸಲುವಾಗಿ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಜನಗಣತಿ ವರದಿಯನ್ನು ಸ್ವೀಕರಿಸಿರುವುದು ಶ್ಲಾಘನೀಯ.

ದಲಿತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ನಿವೇಶನ ಮಂಜೂರು ಮಾಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಕೊಡಗಿನಲ್ಲಿ ಆದಿವಾಸಿಗಳು ಸೇರಿದಂತೆ ಅನೇಕ ಬಡವರಿಗೆ ನಿವೇಶನವಿಲ್ಲದೆ ಕಷ್ಟದ ಬದುಕು ಸಾಗಿಸುತ್ತಿದ್ದಾರೆ. ಇಂತಹವರಿಗೆ ನಿವೇಶನ ಮಂಜೂರು ಮಾಡಲು ಒತ್ತಾಯಿಸಿ, ಸ್ಥಳೀಯ ಪೊಲೀಸ್ ಅಧಿಕಾರಿಯ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಹೆಚ್.ಬಿ. ಮುರುಗ, ತಾಲೂಕು ಸಂಚಾಲಕ ಕುಮಾರ್, ವಿಜಯ, ಸೋನಿಯಾ, ಶೀಲಾ, ಲೋಕೇಶ್, ಮಂಜು, ಸುರೇಶ್, ಮಣಿ, ನಾಸರ್, ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಸಿದ್ದಪ್ಪ, ತಿತಿಮತಿ ಲ್ಯಾಂಪ್ ಸೊಸೈಟಿ ಅಧ್ಯಕ್ಷ ಮಣಿಕುಂಞ ಸೇರಿದಂತೆ ವಿವಿಧ ಗ್ರಾಮ ಸಮಿತಿಯ ಸದಸ್ಯರು ಇನ್ನಿತರ ಪ್ರಮುಖರು ಹಾಜರಿದ್ದರು.