ಮಡಿಕೇರಿ, ಅ. ೨೨ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದಿಂದ ನ. ೨೪ ರಂದು ವೀರಾಜಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ವಾರ್ಷಿಕ ಕ್ರೀಡಾಕೂಟ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಕಳೆದ ಸಾಲಿನ ಕ್ರೀಡಾಕೂಟದಲ್ಲಿ ಮಾಜಿ ಸೈನಿಕರುಗಳಿಗೆ, ವೀರ ನಾರಿಯರಿಗೆ, ವಿಧವೆಯರಿಗೆ, ಅವಲಂಬಿತರಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಬಾರಿ ಕ್ರೀಡಾಕೂಟದಲ್ಲಿ ಅರೆಸೇನಾ ಪಡೆಗಳ ಮಾಜಿ ಯೋಧರು ಮತ್ತು ಅವರ ಕುಟುಂಬಸ್ಥರಿಗೂ ಅವಕಾಶವನ್ನು ಕಲ್ಪಿಸಲಾಗಿದೆ. ಅಂದು ಬೆಳಿಗ್ಗೆ ೯ ಗಂಟೆಗೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನದವರೆಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿವೆೆ. ಮಧ್ಯಾಹ್ನದ ಬಳಿಕ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. ಕ್ರೀಡಾಕೂಟ ನಡೆಯುವ ಸಂದರ್ಭದಲ್ಲೇ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆÉಯನ್ನು ಏರ್ಪಡಿಸಲಾಗಿದೆ. ಇಸಿಜಿ ಪರೀಕ್ಷಾ ಸೌಲಭ್ಯವೂ ಇರಲಿದೆ ಎಂದು ಸಂಘದ ಅಧ್ಯಕ್ಷ ಕೊಟ್ಟುಕತ್ತೀರ ಸೋಮಣ್ಣ ತಿಳಿಸಿದ್ದಾರೆ.