ಪೊನ್ನಂಪೇಟೆ, ನ. ೩೦: ದಕ್ಷಿಣ ಕೊಡಗಿನಲ್ಲಿ ಜಾನುವಾರುಗಳ ಮೇಲೆ ಹುಲಿ ದಾಳಿ ಮುಂದುವರೆದಿದ್ದು, ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ ರೈತ ನೂರೇರ ರಮೇಶ್ ಎಂಬವರಿಗೆ ಸೇರಿದ ಹಸು ಹುಲಿದಾಳಿಗೆ ಬಲಿಯಾಗಿದೆ. ಈ ಭಾಗದಲ್ಲಿ ಪದೇ ಪದೇ ಹುಲಿಯ ದಾಳಿಗೆ ಜಾನುವಾರುಗಳು ಬಲಿಯಾಗುತ್ತಿದ್ದು, ತೋಟದಲ್ಲಿ ಕೆಲಸ ಮಾಡಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಮಕ್ಕಳು ಶಾಲೆಗೆ ತೆರಳಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಅರಣ್ಯ ಇಲಾಖೆಯವರು ಕೂಡಲೇ ಹುಲಿಯನ್ನು ಸೆರೆ ಹಿಡಿದು ಆತಂಕ ನಿವಾರಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಕೂಡಲೇ ಹುಲಿಯನ್ನು ಹಿಡಿದು ಆತಂಕ ನಿವಾರಿಸದೆ ಇದ್ದಲ್ಲಿ ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಘಟನಾ ಸ್ಥಳಕ್ಕೆ ಪೊನ್ನಂಪೇಟೆ ವಲಯ ಅರಣ್ಯ ಅಧಿಕಾರಿ ಶಂಕರ್, ಉಪ ವಲಯ ಅರಣ್ಯಾಧಿಕಾರಿ ಗಣೇಶ್, ಗಾರ್ಡ್ ಮಣಿಕಂಠ, ಆರ್‌ಆರ್‌ಟಿ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದ್ದು, ಹುಲಿ ಪತ್ತೆಗೆ ಕ್ಯಾಮರಾ ಅಳವಡಿಸಿದ್ದಾರೆ.