ಪೊನ್ನಂಪೇಟೆ, ನ. ೩೦: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ವೀರಾಜಪೇಟೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ವೀರಾಜಪೇಟೆ ತಾಲೂಕು ಹಾಗೂ ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮದ ಅಂಗವಾಗಿ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಹಾಗೂ ದುಶ್ಚಟ ದುರಭ್ಯಾಸದಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಹಾಗೂ ಅರಿವು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಕಾಲೇಜಿನ ಉಪ ಪ್ರಾಂಶುಪಾಲೆ ಎಂ.ಕೆ. ಪದ್ಮಾ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲವಾಗಿರುತ್ತದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಸ್ವನಿಗ್ರಹದೊಂದಿಗೆ ಹತೋಟಿಗೆ ತಂದುಕೊಳ್ಳುವ ಮೂಲಕ ದುಶ್ಚಟಗಳಿಂದ ದೂರವಿದ್ದು ಆರೋಗ್ಯವಂತ ಸಮಾಜ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಬೇಕು. ವಿದ್ಯಾರ್ಥಿಗಳೇ ಸಮಾಜದ ಆಸ್ತಿ ಎಂದರು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ಪಿ.ಪಿ. ನಂದಕುಮಾರ್ ಮಾತನಾಡಿ, ಇದುವರೆಗೆ ಕರ್ನಾಟಕ ರಾಜ್ಯದ ೧೭,೫೪೮ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮಗಳನ್ನು ನಡೆಸಲಾಗಿದ್ದು, ೨೦ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿದ್ದಾರೆ. ಜನಜಾಗೃತಿ ವೇದಿಕೆಯ ಮುಖೇನ ಸಮುದಾಯದ ಸಹಭಾಗಿತ್ವದೊಂದಿಗೆ ಇದುವರೆಗೆ ೧೮೮೩ ಮದ್ಯವರ್ಜನ ಶಿಬಿರಗಳನ್ನು ನಡೆಸಿ ೧ ಲಕ್ಷದ ೫೦ ಸಾವಿರ ಮದ್ಯವ್ಯಸನಿಗಳನ್ನು ವ್ಯಸನ ಮುಕ್ತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ದೃಢ ನಿರ್ಧಾರ, ಸಂಧಾನ ಕೌಶಲ, ರಚನಾತ್ಮಕ ಚಿಂತನೆ, ವಿಮರ್ಶಾತ್ಮಕ ಚಿಂತನೆ, ಸಂವಹನ ಕುಶಲತೆ, ವ್ಯಕ್ತಿ - ವ್ಯಕ್ತಿ ಸಂಬAಧ, ಸಮಯ ಪಾಲನೆ, ನಡತೆ, ಗೌರವ, ಆತ್ಮಸ್ಥೆöÊರ್ಯ, ಸಮಸ್ಯಾ ಪರಿಹಾರ, ದೃಢ ನಿಲುವು, ಭಾವ ನಿಯಂತ್ರಣ, ಧನಾತ್ಮಕ ಚಿಂತನೆ, ಕರ್ತವ್ಯ ಪ್ರಜ್ಞೆ ಮತ್ತು ಪ್ರೀತಿ ವಿಶ್ವಾಸಗಳಿಂದ ಮಾತ್ರ ವ್ಯಸನ ಮುಕ್ತ ಜೀವನವನ್ನು ನಡೆಸಲು ಸಾಧ್ಯ. ಆರೋಗ್ಯವಂತ ಶರೀರವೇ ಆತ್ಮದ ಅರಮನೆ. ಅನಾರೋಗ್ಯವಂತ ಶರೀರವೇ ಆತ್ಮದ ಸೆರೆಮನೆ ಎಂದರು.
ಆರೋಗ್ಯಪೂರ್ಣ ಸಮಾಜ ಅಥವಾ ದುಶ್ಚಟಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ. ಬಹುತೇಕ ಯುವಜನತೆ ಬಾಹ್ಯ ವ್ಯಕ್ತಿಗಳ ಪ್ರಭಾವದಿಂದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡೋಣ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ ತಾಲೂಕು ಕ್ಷೇತ್ರ ಯೋಜನಾಧಿಕಾರಿ ದಿನೇಶ್, ಗೋಣಿಕೊಪ್ಪಲು ವಲಯದ ಮೇಲ್ವಿಚಾರಕ ನಿತಿನ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕ ಚೇತನ್ ಚಿಣ್ಣಪ್ಪ, ಉಪನ್ಯಾಸಕರಾದ ಜೆಸಿಂತ, ಕೆ.ಎಂ. ಕುಸುಮ್, ಸೇವಾ ಪ್ರತಿನಿಧಿನಿಧಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.