ಮಡಿಕೇರಿ, ಫೆ. ೩: ನೋವಿನ ಬದುಕು ಸಾಗಿಸುತ್ತಿರುವ ಆದಿವಾಸಿ ಕುಟುಂಬಗಳ ಮಕ್ಕಳಿಗೆ ಸರಕಾರ ಅಗತ್ಯ ಶಿಕ್ಷಣ ನೀಡುವ ಮೂಲಕ ಬಲ ತುಂಬಬೇಕು ಎಂದು ಕೇರಳ ಸರಕಾರದ ಸಮಾಜ ಕಲ್ಯಾಣ ಮತ್ತು ಗಿರಿಜನ ಖಾತೆ ಸಚಿವ ಓ.ಆರ್. ಕೇಳು ಕರೆ ನೀಡಿದ್ದಾರೆ.

ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ ಕೊಡಗಿನ ವೈ.ಕೆ.ಗಣೇಶ್ ಅವರಿಗೆ ವಿವಿಧ ಸಂಘಟನೆಗಳು ಗೋಣಿಕೊಪ್ಪಲಿನಲ್ಲಿ ನುಡಿನಮನದ ಮೂಲಕ ಶ್ರದ್ಧಾಂಜಲಿ ಅರ್ಪಿಸಿದವು.

ಹೋರಾಟಗಾರ್ತಿ ಜೆ.ಆರ್.ಪ್ರೇಮ ಅವರ ಅಧ್ಯಕ್ಷತೆಯಲ್ಲಿ ಎಪಿಎಂಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು ತುಳಿತಕ್ಕೊಳಗಾದವರ ಪರ ಧ್ವನಿ ಎತ್ತುತ್ತಿದ್ದ ವೈ.ಕೆ.ಗಣೇಶ್ ಅವರು ಅನಾರೋಗ್ಯದಿಂದ ಸಣ್ಣ ವಯಸ್ಸಿನಲ್ಲೇ ನಮ್ಮನ್ನು ಅಗಲಿರುವುದು ನೋವಿನ ಸಂಗತಿಯಾಗಿದೆ. ಆದಿವಾಸಿಗಳ ಏಳಿಗೆಗಾಗಿ ಅಪಾರ ಕೊಡುಗೆ ನೀಡಿದ್ದಾರೆ, ದಲಿತರ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ಮಾಡಿದ್ದಾರೆ ಎಂದರು.

ಜಿಲ್ಲೆಯಲ್ಲಿ ಆದಿವಾಸಿಗಳು ಕೂಲಿ ಕೆಲಸ ಮಾಡಿಕೊಂಡು ಸಂಕಷ್ಟದ ಬದುಕು ಸಾಗಿಸುತ್ತಿದ್ದಾರೆ. ಮೂಲಭೂತ ಸೌಲಭ್ಯಗಳ ಕೊರತೆಯಿಂದ ನೋವು ಅನುಭವಿಸುತ್ತಿದ್ದಾರೆ. ಸರಕಾರ ಆದಿವಾಸಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಎಲ್ಲಾ ಸೌಲಭ್ಯಗಳನ್ನು ನೀಡುವ ಮೂಲಕ ಸಮಸ್ಯೆಗಳಿಂದ ಮುಕ್ತಗೊಳಿಸಬೇಕು. ಆದಿವಾಸಿಗಳು ತಮ್ಮ ಹಕ್ಕುಗಳನ್ನು ಪಡೆಯಲು ಮುಂದಾಗಬೇಕು ಎಂದು ತಿಳಿಸಿದರು. ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸಂಚಾಲಕ ಡಾ.ಎಸ್.ವೈ. ಗುರುಶಾಂತ್, ಸಿಪಿಐಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಡಾ.ಕೆ. ಪ್ರಕಾಶ್ ಮಾತನಾಡಿದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ರಮೇಶ್ ಹೆಚ್.ಬಿ., ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಡಾ. ದುರ್ಗಾಪ್ರಸಾದ್, ಅಖಿಲ ಭಾರತ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಲತೀಫ್, ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್. ಭರತ್, ಪ್ರಧಾನ ಕಾರ್ಯದರ್ಶಿ ಎ.ಸಿ. ಸಾಬು, ಕೊಡಗು ಜಿಲ್ಲಾ ತೋಟ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಡಿ. ಕುಟ್ಟಪ್ಪ ಅವರುಗಳು ಮಾತನಾಡಿದರು. ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಜಿಲ್ಲಾ ಮುಖಂಡರಾದ ಪಿ.ಕೆ. ರಮೇಶ್, ಅಶೋಕ, ನ್ಯಾನ್ಸಿ, ತಿಮ್ಮ, ರೋಹಿಣಿ, ನೇತ್ರಾವತಿ, ರಾಮು ಸೇರಿದಂತೆ ಜಿಲ್ಲೆಯ ವಿವಿಧೆಡೆಯ ಆದಿವಾಸಿ ಕುಟುಂಬಗಳು ಪಾಲ್ಗೊಂಡಿದ್ದರು.