ವೀರಾಜಪೇಟೆ, ಫೆ. ೫: ವಿದ್ಯಾರ್ಥಿ ಜೀವನವು ಅಮೂಲ್ಯ ವಾಗಿದ್ದು ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು ಎಂದು ವೀರಾಜಪೇಟೆಯ ಪೊಲೀಸ್ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಕರೆ ನೀಡಿದರು.

ಇಲ್ಲಿನ ಕಾವೇರಿ ಪಿ.ಯು. ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆಯನ್ನು ರೂಢಿಸಿಕೊಳ್ಳಬೇಕು. ಮೊಬೈಲನ್ನು ಹಿತಿಮಿತಿಯಾಗಿ ಬಳಸಬೇಕು. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗದೆ ಉತ್ತಮ ಜೀವನವನ್ನು ನಡೆಸಬೇಕೆಂದು ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾವೇರಿ ಎಜುಕೇಷನ್ ಸೊಸೈಟಿ ಉಪಾಧ್ಯಕ್ಷ ಕುಪ್ಪಂಡ ಮೋತಿ ಬೆಳ್ಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಬೇಕು. ಶಿಕ್ಷಕರು ಮತ್ತು ಪೋಷಕರಿಗೆ ಗೌರವವನ್ನು ನೀಡುವುದರ ಮೂಲಕ ಮಾದರಿ ಪ್ರಜೆಗಳಾಗಬೇಕು ಎಂದರು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್. ಎಂ. ನಾಣಯ್ಯ ರವರು ೨೦೨೪-೨೫ನೇ ಸಾಲಿನ ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು. ಶಿಕ್ಷಣ ಹಾಗೂ ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ತದನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಸಾಲ್ಡಾನಾ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ. ಪಿ. ದಮಯಂತಿ, ಉಪನ್ಯಾಸಕರಾದ ಡಯಾನ ಸೋಮಯ್ಯ, ಅನುಪಮಾ ತಿಮ್ಮಯ್ಯ, ಇತರ ಉಪನ್ಯಾಸಕರು, ಸಿಬ್ಬಂದಿಗಳು, ಹಾಗೂ ಮಕ್ಕಳು ಉಪಸ್ಥಿತರಿದ್ದರು.