ಮಡಿಕೇರಿ, ಮಾ. ೧೪: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಮನವಿ ಮೇರೆಗೆ ಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಸಲ್ಲಿಸಿದ ರೂ. ೧೦ ಕೋಟಿ ವಿಶೇಷ ಅನುದಾನಕ್ಕೆ ಆರ್ಥಿಕ ಇಲಾಖೆಯ ಸಮ್ಮತಿಯೊಂದಿಗೆ ಸರ್ಕಾರದಿಂದ ಅನುಮೋದನೆ ದೊರಕಿದೆ.

೨೦೨೪-೨೫ ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ಎ.ಎಸ್.ಪೊನ್ನಣ್ಣ ಅವರು ಸಲ್ಲಿಸಿದ್ದ ಪ್ರಸ್ತಾವನೆಯ ಆಧಾರದಲ್ಲಿ ಕಾಮಗಾರಿಗೆ ಅನುಮೋದನೆ ದೊರಕಿದ್ದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ೩೪ ಆಯ್ದ ಗ್ರಾಮೀಣ ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಗೆ ಒಟ್ಟು ೧೨ ಪ್ಯಾಕೆಜ್‌ಗಳಲ್ಲಿ ೧೦ ಕೋಟಿ ಮೊತ್ತದಲ್ಲಿ ಕಾಮಗಾರಿ ನಡೆಸುವಂತೆ ಸರ್ಕಾರ ಆದೇಶ ಮಾಡಿದೆ.