ಸೋಮವಾರಪೇಟೆ, ಏ. ೨: ಇಲ್ಲಿನ ಜೈ ಜವಾನ್ ಮಾಜಿ ಸೈನಿಕರ ಸಂಘದ ವತಿಯಿಂದ ಕಚೇರಿ ಆವರಣದಲ್ಲಿ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಮಾಜಿ ಸೈನಿಕರು ಹಾಗೂ ಸಾರ್ವಜನಿಕರು ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಈರಪ್ಪ ಅವರು, ಜನರಲ್ ತಿಮ್ಮಯ್ಯ ಅವರು ಭಾರತೀಯ ಸೈನ್ಯದಲ್ಲಿ ಸಲ್ಲಿಸಿದ ಸೇವೆ, ವೀರತನ, ದೇಶದ ರಕ್ಷಣಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಸ್ಮರಿಸಿದರು. ಜನರಲ್ ತಿಮ್ಮಯ್ಯ ಅವರ ಜೀವನ ಇಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು. ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ದೇಶಪ್ರೇಮಿಗಳಾಗಿ ಬಾಳಬೇಕೆಂದು ಕರೆ ನೀಡಿದರು.

ಈ ಸಂದರ್ಭ ಸಂಘದ ಉಪಾಧ್ಯಕ್ಷ ಎಸ್.ಎಂ. ಸುಬ್ರಮಣ್ಯ, ಕಾರ್ಯದರ್ಶಿ ಕೆ.ಜಿ. ಬಸಪ್ಪ, ಖಜಾಂಚಿ ಕೆಂಪಯ್ಯ, ಕಿರಣ್‌ಕುಮಾರ್, ಪೂವಯ್ಯ, ಬೆಳ್ಳಿಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.