ಮಡಿಕೇರಿ, ಏ. ೭: ಪರಿಶಿಷ್ಟರಿಗೆ ಮೀಸಲಾಗಿರುವ ಸೌಲಭ್ಯಗಳನ್ನು ಹೊಂದಿಕೊಳ್ಳುವ ಸಲುವಾಗಿ ಕೆಲವರು ನಕಲಿ ಜಾತಿ ಪತ್ರಗಳನ್ನು ಪಡೆದು ಕೊಳ್ಳುತ್ತಿರುವುದನ್ನು ವಿರೋಧಿಸಿ ಆದಿವಾಸಿ ಸಮುದಾಯ ಸಂಘಟನೆಗಳ ಒಕ್ಕೂಟದ ವತಿಯಿಂದ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಫೀ.ಮಾ. ಕಾರ್ಯಪ್ಪ ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟ ನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು. ಜಿಲ್ಲೆಯಲ್ಲಿ ನಕಲಿ ಜಾತಿ ಪ್ರಮಾಣಪತ್ರ ಪಡೆದು ಪರಿಶಿಷ್ಟರಿಗೆ ಸಿಗಬೇಕಾದ ಸೌಲಭ್ಯಗಳನ್ನು ಉಳ್ಳವರು ಪಡೆದುಕೊಳ್ಳುತ್ತಿದ್ದಾರೆ. ಇದರಿಂದ ಪರಿಶಿಷ್ಟರಿಗೆ ಅನ್ಯಾಯವಾಗುತ್ತಿದೆ. ಅಧಿಕಾರಿಗಳು ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಈ ಪ್ರವೃತ್ತಿಯನ್ನು ಕೂಡಲೇ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಪರಿಶಿಷ್ಟರಿರುವ ಹಕ್ಕನ್ನು ಪಡೆದುಕೊಳ್ಳಲು ಅಧಿಕಾರವಿದೆ. ಆದರೆ, ಹೋರಾಟದ ಮೂಲಕ ಪಡೆದುಕೊಳ್ಳುವಂತಾಗಿರುವುದು ದುರದೃಷ್ಟಕರ ಎಂದು ಹೇಳಿದರು. ತಮ್ಮ ಹಕ್ಕನ್ನು ಪಡೆಯಲು ಸಂವಿಧಾನದಲ್ಲಿ ಅವಕಾಶವಿದ್ದರೂ ಕೆಲವರು ಇದನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಸರಿಯಲ್ಲ. ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಸೌಲಭ್ಯ ಹೊಂದಿಕೊಳ್ಳುವುದು ಅಪರಾಧ. ಪರಿಶಿಷ್ಟರಿಗೆ ಸವಲತ್ತು ನೀಡಬೇಕಾಗಿರುವುದು ಜಿಲ್ಲಾಮಟ್ಟದ ಅಧಿಕಾರಿಗಳ ಕರ್ತವ್ಯವಾಗಿದೆ. ಆದಿವಾಸಿಗಳ ಈ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದರು. ಬಳಿಕ ಆದಿವಾಸಿಗಳು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭ ಬಿಜೆಪಿ ಪದಾಧಿಕಾರಿಗಳಾದ ಗುಮ್ಮಟಿರ ಕಿಲನ್ ಗಣಪತಿ, ಪಾಣತ್ತಲೆ ಕವನ್ ಕಾವೇರಪ್ಪ, ಆದಿವಾಸಿ ಒಕ್ಕೂಟಗಳ ಪ್ರಮುಖರಾದ ಆರ್.ಕೆ. ಚಂದ್ರ, ಹೆಚ್.ಟಿ. ಕಾಳಿಂಗ, ಬಿ.ಬಿ. ಮಹೇಶ್, ಪಾಪಣ್ಣ ಸೇರಿದಂತೆ ಇತರರು ಪಾಲ್ಗೊಂಡಿದ್ದರು.