ಗೋಣಿಕೊಪ್ಪಲು, ಏ. ೨೫: ದಕ್ಷಿಣ ಕೊಡಗಿನ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಣ ಗ್ರಾಮದಲ್ಲಿ ತೋಟದ ಮಧ್ಯೆ ಒಂಟಿ ಮನೆಯಲ್ಲಿ ವಾಸವಿದ್ದ ತೋಟದ ಮಾಲೀಕನನ್ನು ಆಗಂತುಕರು ನೈಲನ್ ದಾರ ಬಳಸಿ ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ. ಕೊಲೆ ಮಾಡಿದ ನಂತರ ಮನೆಯಲ್ಲಿದ್ದ ಬೀಗದ ಕೀಗಳು, ಮೃತಪಟ್ಟ ಪ್ರದೀಪ್ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಹಾಗೂ ಆತನ ಪರ್ಸ್ನೊಂದಿಗೆ ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ. ಇದರಿಂದಾಗಿ ಕೊಲೆಗಾರರು ಹಣ ಹಾಗೂ ಚಿನ್ನಕ್ಕಾಗಿ ಕೊಲೆ ಮಾಡಿರುವ ಶಂಕೆ ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಪೊಲೀಸರು ಈಗಾಗಲೇ ಘಟನೆಗೆ ಸಂಬAಧಿಸಿದAತೆ ಸಂಶಯಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿ ತನಿಖೆಯನ್ನು ಮುಂದುವರೆಸುತ್ತಿದ್ದಾರೆ.

ಮನೆಯಲ್ಲಿ ಸಿಕ್ಕಿರುವ ಸಿಸಿ ಕ್ಯಾಮರಾ ದೃಶ್ಯಾವಳಿಗಳು ಪೊಲೀಸರ ಕೈಸೇರಿದ್ದು ಸಾಕಷ್ಟು ಮಾಹಿತಿಗಳು ಲಭ್ಯವಾಗಿವೆ ಎನ್ನಲಾಗಿದೆ.