ಸೋಮವಾರಪೇಟೆ, ಏ. ೨೫: ಕೊಡಗು ವಿಶ್ವವಿದ್ಯಾಲಯಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಹೆಸರನ್ನಿಡಬೇಕು. ಈ ಬಗ್ಗೆ ಸರ್ಕಾರ ಅಧಿಕೃತ ಘೋಷಣೆ ಮಾಡಬೇಕು ಹಾಗೂ ಯಾವುದೇ ಕಾರಣಕ್ಕೂ ಬೇರೆ ವಿ.ವಿ.ಯೊಂದಿಗೆ ವಿಲೀನ ಮಾಡಬಾರದು ಎಂದು ಆಗ್ರಹಿಸಿ ತಾ. ೨೮ ರಂದು ಪಟ್ಟಣದ ಜೇಸಿ ವೇದಿಕೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ತಿಳಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್, ಕೊಡಗು ವಿಶ್ವವಿದ್ಯಾಲಯವನ್ನು ವಿಲೀನ ಮಾಡುವುದಿಲ್ಲ ಎಂದು ಸರ್ಕಾರ ಅಧಿಕೃತ ಹೇಳಿಕೆ ನೀಡಿಲ್ಲ. ಇದರಿಂದ ವಿದ್ಯಾರ್ಥಿಗಳು ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಕ್ಕೆ ಸೇರಲು ಭಯಪಡುತ್ತಿದ್ದಾರೆ ಎಂದು ಹೇಳಿದರು.

ತಾ. ೨೮ ರಂದು ನಡೆಯುವ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಕೈಜೋಡಿಸಿವೆ. ಸರ್ಕಾರ ಕೂಡಲೇ ವಿಶ್ವವಿದ್ಯಾಲಯಕ್ಕೆ ಅವಶ್ಯಕ ಅನುದಾನ ಬಿಡುಗಡೆಗೊಳಿಸಬೇಕು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಹೆಸರನ್ನು ವಿಶ್ವವಿದ್ಯಾಲಯಕ್ಕೆ ಇಡಬೇಕು ಎಂದು ಪ್ರತಿಭಟನಾ ಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಕರವೇ ನಗರ ಘಟಕ ಅಧ್ಯಕ್ಷ ಬಿ.ಎಸ್. ಮಂಜುನಾಥ್, ಜಿಲ್ಲಾ ಸಮಿತಿ ಉಪಾಧ್ಯಕ್ಷ ಚಂದ್ರು, ಖಜಾಂಚಿ ಜಗನ್ನಾಥ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಜಿತ್ ಇದ್ದರು.