ಸೋಮವಾರಪೇಟೆ, ಏ. ೨೮: ವಿಶೇಷ ಪ್ರಾತಿನಿಧ್ಯ ಮತ್ತು ವಿಶೇಷ ಪ್ರಕರಣದ ಅಡಿಯಲ್ಲಿ ಕೊಡಗು ವಿಶ್ವವಿದ್ಯಾಲಯದ ವಿಲೀನ ಪ್ರಕ್ರಿಯೆ ಚಿಂತನೆ ಕೈಬಿಡಬೇಕು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹೆಸರಿನಲ್ಲಿ ಸ್ವತಂತ್ರ ವಿಶ್ವ ವಿದ್ಯಾಲಯವನ್ನಾಗಿ ಮುಂದುವರೆಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೊಡಗು ವಿಶ್ವವಿದ್ಯಾಲಯವನ್ನು ಬೇರೆ ವಿ.ವಿ.ಗೆ ವಿಲೀನಗೊಳಿಸುವ ಸರ್ಕಾರದ ಚಿಂತನೆಯನ್ನು ಖಂಡಿಸಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ, ಕೊಡಗು ವಿ.ವಿ. ಉಳಿಸಿಕೊಳ್ಳಲು ಎಲ್ಲಾ ರೀತಿಯ ಹೋರಾಟಕ್ಕೂ ಸಿದ್ಧವೆಂದು ಕರವೇ ಪದಾಧಿಕಾರಿಗಳು ಘೋಷಿಸಿದರು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ, ಕೊಡಗು ವಿ.ವಿ. ಪರವಾಗಿ ಘೋಷಣೆಗಳನ್ನು ಕೂಗಿದರು. ಸಂತೆ ದಿನವಾದ ಸೋಮವಾರ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿದ್ದರಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ನAತರ ಜೇಸೀ ವೇದಿಕೆಯಲ್ಲಿ ಪ್ರತಿಭಟನೆಯನ್ನು ಮುಂದುವರೆಸಿದ ಪದಾಧಿಕಾರಿಗಳು, ಕೊಡಗು ವಿಶ್ವವಿದ್ಯಾಲಯಕ್ಕೆ ಫೀಲ್ಡ್ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರನ್ನಿಡಬೇಕು. ಈ ಬಗ್ಗೆ ಸರ್ಕಾರ ಅಧಿಕೃತ ಘೋಷಣೆ ಮಾಡಬೇಕು ಹಾಗು ಯಾವುದೇ ಕಾರಣಕ್ಕೂ ಬೇರೆ ವಿ.ವಿ.ಯೊಂದಿಗೆ ವಿಲೀನ ಮಾಡಬಾರದು ಎಂದು ಆಗ್ರಹಿಸಿದರು.
ಕೊಡಗು ವಿಶ್ವವಿದ್ಯಾಲಯವನ್ನು ವಿಲೀನ ಮಾಡುವುದಿಲ್ಲ ಎಂದು ಸರ್ಕಾರ ಅಧಿಕೃತ ಹೇಳಿಕೆ ನೀಡಿಲ್ಲ. ಇದರಿಂದ ವಿದ್ಯಾರ್ಥಿಗಳು ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಕ್ಕೆ ಸೇರಲು ಭಯಪಡುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್ ಹೇಳಿದರು.
ಕೊಡಗು ವಿಶ್ವ ವಿದ್ಯಾಲಯಕ್ಕೆ ಕೂಡಲೇ ಅವಶ್ಯಕ ಅನುದಾನ ಬಿಡುಗಡೆಗೊಳಿಸಬೇಕು. ಫೀಲ್ಡ್ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಹೆಸರನ್ನು ವಿಶ್ವವಿದ್ಯಾಲಯಕ್ಕೆ ಇಡಬೇಕು ಎಂದು ಒತ್ತಾಯಿಸಿದರು.
೨ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಈ ವಿ.ವಿ.ಗೆ ಒಳಪಡುತ್ತಿದ್ದು, ವಾರ್ಷಿಕ ೨.೯೦ ಕೋಟಿ ಶುಲ್ಕ ಸಂಗ್ರಹವಾಗುತ್ತಿದೆ. ಉತ್ತಮ ಕಟ್ಟಡ, ಮೂಲಭೂತ ಸೌಕರ್ಯಗಳನ್ನು ಒಳಗೊಂಡಿರುವ, ಕೊಡಗಿನ ಹೆಮ್ಮೆಯ ಸಂಕೇತವಾಗಿರುವ ವಿ.ವಿ.ಯನ್ನು ಯಾವುದೇ ಕಾರಣಕ್ಕೂ ಮುಚ್ಚುವ ಅಥವಾ ವಿಲೀನಗೊಳಿಸುವ ಯತ್ನಕ್ಕೆ ಸರ್ಕಾರ ಕೈ ಹಾಕಬಾರದು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರಿನಲ್ಲಿ ವಿ.ವಿ. ಮುಂದುವರೆಯಬೇಕು ಎಂದು ಆಗ್ರಹಿಸಿದರು.
ಸರ್ಕಾರ ಕೊಡಗು ವಿಶ್ವವಿದ್ಯಾಲಯವನ್ನು ಆದಾಯದ ದೃಷ್ಟಿಯಿಂದ ನೋಡಬಾರದು. ರೈತರು, ಬಡವರು, ಕೂಲಿ ಕಾರ್ಮಿಕರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ-ಪಂಗಡದ ಮಕ್ಕಳು ವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿದ್ದಾರೆ. ವಿಶ್ವವಿದ್ಯಾಲಯ ವಿಲೀನವಾದರೆ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಅವಶ್ಯಕತೆಯಿರುವ ಕೋರ್ಸ್ಗಳು ಇಲ್ಲದಂತಾಗುತ್ತದೆ ಎಂದು ಹೇಳಿದರು.
ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಬಾರದು. ಜಿಲ್ಲೆಯ ಶಾಸಕರಾದ ಡಾ.ಮಂತರ್ಗೌಡ ಹಾಗು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಮನಸ್ಸು ಮಾಡಿ ಪಟ್ಟು ಹಿಡಿದರೆ, ಕೊಡಗು ವಿಶ್ವವಿದ್ಯಾಲಯವನ್ನು ವಿಲೀನ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಈ ಬಗ್ಗೆ ಶಾಸಕರು ಪ್ರಯತ್ನ ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ ಮಾತನಾಡಿ, ವಿ.ವಿ.ಯಿಂದ ಮಕ್ಕಳಿಗೆ ಹೆಚ್ಚು ಪ್ರಯೋಜನವಾಗಿವೆ. ಇದನ್ನು ಸರ್ಕಾರ ಮನಗಾಣಬೇಕು. ಶಾಸಕರುಗಳು ಗಮನ ಹರಿಸಿ ಗುಡ್ಡಗಾಡು ಹಾಗೂ ಭೌಗೋಳಿಕವಾಗಿ ವಿಭಿನ್ನವಾಗಿರುವ ಕೊಡಗಿಗೆ ವಿಶೇಷ ಪ್ರಾತಿನಿಧ್ಯ ನೀಡಿ ವಿ.ವಿ.ಯನ್ನು ಉಳಿಸಿಕೊಡಬೇಕೆಂದರು. ಈ ಸಂಬAಧಿತ ಮನವಿ ಪತ್ರವನ್ನು ಕರವೇ ಕಾರ್ಯಕರ್ತರು, ತಾಲೂಕು ಆಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಕರವೇ ಜಿಲ್ಲಾ ಗೌರವಾಧ್ಯಕ್ಷ ನಾಗೇಗೌಡ, ಪ್ರಧಾನ ಕಾರ್ಯದರ್ಶಿ ಕೆ.ಆರ್. ಮಂಜುನಾಥ್, ತಾಲೂಕು ಅಧ್ಯಕ್ಷ ರೋಹಿತ್ ಗೌಡ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಂಧ್ಯಾ ಗಣೇಶ್, ಕುಶಾಲನಗರ ತಾಲೂಕು ಅಧ್ಯಕ್ಷ ಅಣ್ಣಯ್ಯ, ಸೋಮವಾರಪೇಟೆ ಮಹಿಳಾ ಘಟಕದ ಅಧ್ಯಕ್ಷೆ ವೇದಾವತಿ, ಕುಶಾಲನಗರದ ರೂಪಾ ಗಣೇಶ್, ಸೋಮವಾರಪೇಟೆ ನಗರಾಧ್ಯಕ್ಷ ಬಿ.ಎಸ್. ಮಂಜುನಾಥ್, ಕಾರ್ಯದರ್ಶಿ ರವೀಶ್, ಕೊಡ್ಲಿಪೇಟೆ ಹೋಬಳಿ ಅಧ್ಯಕ್ಷ ರಾಜೇಶ್, ಕೆಟಿಡಿಓ ಅಧ್ಯಕ್ಷ ವಸಂತ್ ಆಚಾರ್ಯ, ಆಟೋ ಚಾಲಕರ ಸಂಘದ ಅಧ್ಯಕ್ಷ ಉಮೇಶ್, ಅಬ್ಬಾಸ್, ಮಿಟ್ಟು, ಮದನ್, ಸಂದೀಪ್, ದಿವ್ಯ, ಶೈಲಾ, ಚಂದ್ರು, ಜಗನ್ನಾಥ್, ವಿದ್ಯಾರ್ಥಿ ಘಟಕದ ಅಜಿತ್ ಸೇರಿದಂತೆ ಇತರರು ಇದ್ದರು.