ಸಿದ್ದಾಪುರ, ಏ. ೨೯: ಸಿದ್ದಾಪುರ ಗುಹ್ಯ ಹಾಗೂ ಕಣ್ಣಂಗಾಲ ಗುಹ್ಯ ಸಂಪರ್ಕ ರಸ್ತೆಯ ಅಭಿವೃದ್ಧಿಗೆ ರೂ. ೨೯ ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ, ಅವರು ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಗ್ರಾಮೀಣಾಭಿವೃದ್ಧಿ ಯೋಜನೆಯ ಸಚಿವರ ವಿಶೇಷ ಅನುದಾನ ಸೇರಿದಂತೆ ರೂ. ೧೨೦ ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗಳ ಕ್ರಿಯಾಯೋಜನೆಯನ್ನು ತಯಾರಿಸಲಾಗಿದ್ದು ಈ ಪೈಕಿ ರೂ. ೩೦ ಕೋಟಿ ವೆಚ್ಚದ ರಸ್ತೆ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿರುತ್ತದೆ. ಸಾಕಷ್ಟು ರಸ್ತೆಗಳು ಹಾಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದ್ದು ಸರ್ಕಾರ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಆಸಕ್ತಿ ವಹಿಸಿ ಮುಖ್ಯಮಂತ್ರಿಗಳು ಅನುದಾನ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಸ್ತೆಗಳ ಅಭಿವೃದ್ಧಿ ಅಲ್ಲದೆ ವೀರಾಜಪೇಟೆ ಕ್ಷೇತ್ರದ ವಿವಿಧ ಭಾಗಗಳಲ್ಲಿ ವಿದ್ಯುತ್ ಕಾಮಗಾರಿಗಳು ಹಾಗೂ ಪೊನ್ನಂಪೇಟೆ ತಾಲೂಕಿನ ಹೊಸ ತಾಲೂಕು ಕಟ್ಟಡ ನಿರ್ಮಾಣ ಪುರಸಭೆ ಅಭಿವೃದ್ಧಿ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿ ಇದೆ ಎಂದು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಮತ್ತಷ್ಟು ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಗೊಳಿಸುವುದಾಗಿ ಭರವಸೆ ನೀಡಿದರು. ಕುಟ್ಟದಿಂದ ಕರಿಕೆವರೆಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿ ಇದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.