ವೀರಾಜಪೇಟೆ, ಮೇ ೯: ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ವೀರಾಜಪೇಟೆ-ಬೈಂದೂರು ರಸ್ತೆಯ ಅಭಿವೃದ್ಧಿ ಕಾಮಗಾರಿಯ ಸುಮಾರು ರೂ. ೨ ಕೋಟಿ ಅನುದಾನದಲ್ಲಿ ಕಾಮಗಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಕಾಕೋಟುಪರಂಬುವಿನಲ್ಲಿ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಶಾಸಕ ಪೊನ್ನಣ್ಣ ಈ ಹಿಂದೆ ಲೋಕೋಪಯೋಗಿ ಸಚಿವರು ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭ, ಕ್ಷೇತ್ರಕ್ಕೆ ಒಳಪಡುವ ಎಲ್ಲಾ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಲಾಗಿತ್ತು. ಅಂದೇ ಸಚಿವರು, ಶಾಸಕರಿಗೆ ಪೂರಕವಾಗಿ ಆಶ್ವಾಸನೆ ನೀಡಿದ್ದು, ಈಗ ಕ್ಷೇತ್ರಾದ್ಯಂತ ಲೋಕೋಪಯೋಗಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಒದಗಿದೆ ಎಂದು ತಿಳಿಸಿದರು. ಈ ಸಂದರ್ಭ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪಕ್ಷದ ಪ್ರಮುಖರು ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.