ಮಡಿಕೇರಿ, ಮೇ ೧೩: ಮಡಿಕೇರಿ ನಗರದಲ್ಲಿ ಇತ್ತೀಚೆಗೆ ರಾಜಾಸೀಟಿನಲ್ಲಿ ಪಾರ್ಕಿಂಗ್ ಶುಲ್ಕ ವಸೂಲಾತಿ ಮಾಡುತ್ತಿದ್ದವರ ಮೇಲೆ ಕೆಲ ಬಿಜೆಪಿ ಪ್ರತಿನಿಧಿಗಳು ಹಲ್ಲೆ ನಡೆಸಿರುವುದು ಖಂಡನೀಯ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಹೇಳಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರ ಗೂಂಡಾ ವರ್ತನೆ ವಿರುದ್ಧ ಸರ್ಕಾರ ಸೂಕ್ತ ಕ್ರಮಗೊಳ್ಳಲಿದೆ.

ಬಿಜೆಪಿ ಅಧಿಕಾರ ಕಳೆದುಕೊಂಡು ಎರಡು ವರ್ಷಗಳಾಗಿದೆ. ಆದರೆ ರೌಡಿಸಂ, ಭ್ರಷ್ಟಾಚಾರ ಮತ್ತು ಅಕ್ರಮ ವ್ಯವಹಾರ ಕೆಲವರಿಂದ ಮುಂದುವರೆದಿದೆ. ಇದರ ಪರಿಣಾಮವಾಗಿ ರಾಜಾಸೀಟು ರಸ್ತೆಯಲ್ಲಿ ಪಾರ್ಕಿಂಗ್ ವಸೂಲಾತಿ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆದಿದ್ದು, ಹಲ್ಲೆ ಮಾಡಿದವರು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಇವರುಗಳು ನಗರದಲ್ಲಿ ಅಕ್ರಮ ಮಳಿಗೆಗಳನ್ನು ನಿರ್ಮಿಸಿಕೊಂಡಿದ್ದು, ಇದನ್ನು ಪ್ರಶ್ನಿಸಲು ಹೋದವರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಈಗಿನ ಶಾಸಕರು ಕೈಗೆತ್ತಿಕೊಂಡ ಅಭಿವೃದ್ಧಿ ಕಾರ್ಯಗಳಿಗೆ ತಡೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿದರು. ಮಾಜಿ ಶಾಸಕರುಗಳು ತಮ್ಮ ಪಕ್ಷದೊಳಗಿರುವವರ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಧರ್ಮಜ ಉತ್ತಪ್ಪ ಒತ್ತಾಯಿಸಿದರು.

ಅಕ್ರಮದಲ್ಲಿ ತೊಡಗಿರುವವರಿಗೆ ಮಾಜಿ ಸಂಸದರು ಹಾಗೂ ಮಾಜಿ ಶಾಸಕರುಗಳ ಬೆಂಬಲವಿದೆಯೇ ಎಂದು ಪ್ರಶ್ನಿಸಿದ ಅವರು, ಅಕ್ರಮ ವ್ಯವಹಾರದ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದರು.

ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ನಗರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ಪಾರ್ಕಿಂಗ್ ಸಮಸ್ಯೆ ಎದುರಾಗಿದೆ. ಆದರೆ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕಾದ ಇಲಾಖೆಗಳು ನಿದ್ದೆಯಲ್ಲಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶಾಸಕರು ಹಾಗೂ ಸರ್ಕಾರದ ಗಮನ ಸೆಳೆದು ನಗರದಲ್ಲಿ ಸುಸಜ್ಜಿತ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ನಗರ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ನಗರಸಭೆಯಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಕಳೆದ ಎರಡೂವರೆ ವರ್ಷಗಳ ಕಾಲ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ. ಬಿಜೆಪಿ ಮನೆಯೊಂದು ಮೂರು ಬಾಗಿಲಾಗಿದೆ ಎಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೊಲ್ಯದ ಗಿರೀಶ್, ಮುನೀರ್ ಅಹ್ಮದ್ ಹಾಗೂ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಉಪಸ್ಥಿತರಿದ್ದರು.