ಸೋಮವಾರಪೇಟೆ, ಮೇ ೨೮: ಉತ್ತಮ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಹಿರಿದಾಗಿದೆ ಎಂದು ಸೋಮವಾರಪೇಟೆಯ ಹಿರಿಯ ವಕೀಲ ಹಾಗೂ ನೋಟರಿ ಈಶ್ವರಚಂದ್ರ ವಿದ್ಯಾಸಾಗರ್ ಅಭಿಪ್ರಾಯಪಟ್ಟರು.

ಇಲ್ಲಿನ ಪತ್ರಿಕಾಭವನದಲ್ಲಿ ತಾಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪ್ರಸ್ತುತ ದಿನಗಳಲ್ಲಿ ಮೊಬೈಲ್ ಬಳಕೆ ಮಾಡುವ ಮೂಲಕ ಸಮಯವನ್ನು ವ್ಯರ್ಥಮಾಡುತ್ತಿದ್ದಾರೆ. ಆ ಗೀಳಿನಿಂದ ಹೊರಬಂದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.

ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ. ಅನಿಲ್ ಮಾತನಾಡಿ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡುವ ಮೂಲಕ ಅವರ ಭವಿಷ್ಯಕ್ಕೆ ಉತ್ತಮ ಮುನ್ನುಡಿ ಬರೆಯಲಾಗಿದೆ. ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಂಡು ಮುಂದುವರೆ ಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ವಕೀಲ ಈಶ್ವರಚಂದ್ರ ವಿದ್ಯಾಸಾಗರ್, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ. ಅನಿಲ್, ಪಟ್ಟಣ ಪಂಚಾಯಿತಿ ಸದಸ್ಯ ಬಿ. ಸಂಜೀವ, ಪೊಲೀಸ್ ನಿರೀಕ್ಷಕ ಮುದ್ದುಮಾದೇವ ಅವರುಗಳನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಇದರೊಂದಿಗೆ ಪತ್ರಕರ್ತರ ಮಕ್ಕಳನ್ನು ಸನ್ಮಾನಿಸಿ, ಪ್ರತಿಭಾ ಪುರಸ್ಕಾರ ನೀಡಲಾಯಿತು. ಪತ್ರಕರ್ತರ ಸಂಘದ ಕುಟುಂಬದ ಮಹಿಳೆಯರಿಗೆ ಸಂಗೀತ ಕುರ್ಚಿ, ಪತ್ರಕರ್ತರಿಗೆ ಬಾಸ್ಕೆಟ್‌ಗೆ ಬಾಲ್ ಹಾಕುವ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.

ಸ್ಪರ್ಧೆಯಲ್ಲಿ ಸುಜಾತ ವಿಜಯ್ ಪ್ರಥಮ, ಶೈಲಾ ವಸಂತ್ ದ್ವಿತೀಯ ಸ್ಥಾನ ಗಳಿಸಿದರು. ಪುರುಷರ ವಿಭಾಗದಲ್ಲಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್ ಕುಮಾರ್ ಪ್ರಥಮ ಮತ್ತು ಡಿ.ಎಲ್. ಆಯುಷ್ ದ್ವಿತೀಯ ಸ್ಥಾನ ಪಡೆದರು.

ಸಂಘದ ಕಾರ್ಯದರ್ಶಿ ಡಿ.ಪಿ. ಲೋಕೇಶ್ ಸ್ವಾಗತಿಸಿ, ಎಸ್.ಎ. ಮುರಳೀಧರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ಉಪಾಧ್ಯಕ್ಷ ಕವನ್ ಕಾರ್ಯಪ್ಪ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ಹರೀಶ್ ಕುಮಾರ್ ವಹಿಸಿದ್ದರು.

ಟಿ.ಜೆ. ಪ್ರವೀಣ್ ಕುಮಾರ್, ಎಸ್.ಎ. ಮುರುಳೀಧರ್, ಟೋಮಿ ಥಾಮಸ್ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.