ಮಡಿಕೇರಿ, ಜೂ. ೨೫: ಕೊಡಗು ಪತ್ರಕರ್ತರ ಸಂಘದ ವತಿಯಿಂದ ಜುಲೈ ೧ ರಂದು ಮಡಿಕೇರಿಯ ಪತ್ರಿಕಾಭವನದಲ್ಲಿ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ. ಅಧ್ಯಕ್ಷತೆಯಲ್ಲಿ ಆಯೋಜಿತ ಪತ್ರಿಕಾ ದಿನಾಚರಣೆ ಸಮಾರಂಭವನ್ನು ಸಮಾಜ ಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಹೊಸದಿಗಂತ ಪತ್ರಿಕೆಯ ಜಿಲ್ಲಾ ವರದಿಗಾರ ಕೆ. ತಿಮ್ಮಪ್ಪ, ಕೊಡಗು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ ಎಸ್.ಎ. ಮುರಳೀಧರ್, ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ. ರವಿಕುಮಾರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಕೊಡಗು ಪತ್ರಕರ್ತರ ಸಂಘದ ೨೦೨೪ನೇ ಸಾಲಿನ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಜೊತೆಗೆ ಸಂಘದ ಸದಸ್ಯರಿಗೆ ಗುರುತಿನ ಕಾರ್ಡ್ಗಳನ್ನೂ ನೀಡಲಾಗುತ್ತದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ.