ಮಡಿಕೇರಿ, ಜೂ. ೨೭: ರೂ. ೩ ಕೋಟಿ ವೆಚ್ಚದಲ್ಲಿ ನಗರದ ಫೀ.ಮಾ. ಕಾರ್ಯಪ್ಪ ವೃತ್ತ ಸಮೀಪ ನಿರ್ಮಾಣಗೊಂಡ ಮಡಿಕೇರಿ ತಾಲೂಕು ಪಂಚಾಯಿತಿ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಉದ್ಘಾಟಿಸಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ೪ ವರ್ಷಗಳ ಬಳಿಕ ತಾ.ಪಂ. ಕಾಮಗಾರಿ ಮುಗಿದರೂ ಎಲ್ಲಾ ವ್ಯವಸ್ಥೆಯೊಂದಿಗೆ ಸೇವೆಗೆ ಮುಕ್ತವಾಗಿದೆ. ಸರಕಾರ ತಹಶೀಲ್ದಾರ್ ಕಚೇರಿ ಹಾಗೂ ತಾ.ಪಂ. ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುತ್ತಿದೆ. ರಾಜ್ಯದ ೪೯ ತಾಲೂಕು ಕೇಂದ್ರಗಳಲ್ಲಿ ಪ್ರಜಾ ಸೌಧ ನಿರ್ಮಾಣವಾಗುತ್ತದೆ. ಜನರಿಗೆ, ಅಧಿಕಾರಿಗಳಿಗೆ ಅನುಕೂಲವಾಗುವಂತೆ ಕಟ್ಟಡದಲ್ಲಿ ವ್ಯವಸ್ಥೆಗಳಿರಲಿವೆ ಎಂದರು.

ಗ್ರಾ.ಪಂ. ಮಟ್ಟದಲ್ಲಿ ಅನೇಕ ಸಮಸ್ಯೆಗಳಿವೆ. ಚುರುಕಿನಿಂದ ಕೆಲಸ ಮಾಡಿದರಷ್ಟೆ ಸಮಸ್ಯೆ ಪರಿಹರಿಸಲು ಸಾಧ್ಯ. ತಾಲೂಕು ಮಟ್ಟದ ಅಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ಇದೆ. ತಾಲೂಕು ಅಧಿಕಾರಿಗಳು ಸ್ಥಳ ಪರಿಶೀಲಿಸಿ ವಾಸ್ತವಾಂಶ ಅರಿತು ಕಾರ್ಯೋನ್ಮುಖಗೊಳ್ಳಬೇಕು. ಜಿಲ್ಲೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಸಮನ್ವಯತೆಯಿಂದ ಶ್ರಮಿಸುತ್ತಿದ್ದಾರೆ. ರಾಜ್ಯ ಸರಕಾರ ಹೆಚ್ಚಿನ ಅನುದಾನವನ್ನು ಜಿಲ್ಲೆಗೆ ನೀಡುತ್ತಿದೆ ಎಂದರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಸರಕಾರದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ವಿನಾಯಕ್ ನರ್ವಾಡೆ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮೋಹನ್ ದಾಸ್, ತಾ.ಪಂ. ಆಡಳಿತಾಧಿಕಾರಿ ಚಂದ್ರಶೇಖರ್ ಹಾಜರಿದ್ದರು. ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಶೇಖರ್ ಸ್ವಾಗತಿಸಿ, ಪವನ್ ಕುಮಾರ್ ನಿರೂಪಿಸಿ, ವಂದಿಸಿದರು.