ಸೋಮವಾರಪೇಟೆ, ಜು. ೯: ಹಗರಣಗಳ ಸುಳಿಯಲ್ಲಿ ಸಿಲುಕಿರುವ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಕೊಡಗು ಮೈಸೂರು ಸಂಸದ ಯದುವೀರ್ ಒಡೆಯರ್ ಟೀಕಿಸಿದರು.

ಪಟ್ಟಣದ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಪಕ್ಷದ ಕಾರ್ಯಕರ್ತರ ಸಭೆ ಹಾಗೂ ಸಾರ್ವಜನಿಕರಿಂದ ಅಹವಾಲು ಆಲಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಎರಡು ವರ್ಷ ಪೂರೈಸಿದ ರಾಜ್ಯ ಸರ್ಕಾರ ಅಭಿವೃದ್ಧಿಯಲ್ಲಿ ಏನು ಮಾಡಿದೆ ಎಂದು ಪ್ರಶ್ನಿಸಿದ ಯದುವೀರ್, ಪ್ರತಿನಿತ್ಯ ಒಂದಲ್ಲಾ ಒಂದು ಹಗರಣಗಳ ಸುಳಿಯಲ್ಲಿ ಸರ್ಕಾರ ಸಿಲುಕುತ್ತಿದೆ. ರಾಜ್ಯದಲ್ಲಿ ಈಗ ನಡೆಯುತ್ತಿರುವ ಬಹುತೇಕ ಅಭಿವೃದ್ಧಿ ಕಾರ್ಯಗಳು ಕೇಂದ್ರ ಸರ್ಕಾರದ್ದು ಎಂದರು.

ಕೊಡಗಿನಲ್ಲಿ ನಾವು ಎರಡು ಶಾಸಕರುಗಳನ್ನು ಕಳೆದುಕೊಂಡಿದ್ದೇವೆ. ಆದರೆ ಆಡಳಿತ ಪಕ್ಷದಿಂದ ಗೆದ್ದಿರುವ ಶಾಸಕರುಗಳಿಗೆ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗುತ್ತಿಲ್ಲವೆಂದರು.

ಹಿAದೆ ಬಿಜೆಪಿ ಸರ್ಕಾರವಿದ್ದಾಗ ಕೊಡಗಿನ ರಸ್ತೆಗಳು ಹೇಗಿದ್ದವು ಈಗ ಹೇಗಿದೆ ಎಂಬುದನ್ನು ಜನತೆ ಕಣ್ಣಾರೆ ಕಾಣುತ್ತಿದ್ದಾರೆ. ರಸ್ತೆಗಳ ಅಭಿವೃದ್ಧಿ ಮಾಡಬೇಕಾಗಿದ್ದು ರಾಜ್ಯಸರ್ಕಾರದ ಹೊಣೆ. ಆದರೆ ಇದನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕರುಗಳಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಕಾಳಪ್ಪ, ನಿಕಟಪೂರ್ವ ಅಧ್ಯಕ್ಷ ಭಾರತೀಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್, ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ರವಿ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರದ್ದರು.