ನಾಪೋಕ್ಲು, ಆ. ೨೪: ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಸುತ್ತದೆ ಎಂದು ಪಾರಾಣೆ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ರಜನಿ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಮತ್ತು ಪಾರಾಣೆ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಚೆರಿಯಪರಂಬು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟವನ್ನು ಕ್ರೀಡಾ ಜ್ಯೋತಿಯನ್ನು ಬೆಳಗುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿ, ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಕ್ರೀಡಾಕೂಟದಲ್ಲಿ ಪಾರಾಣೆ ಕಕ್ಕಬ್ಬೆ, ಬಲ್ಲಮಾವಟಿ, ಆಕ್ಸ್ಫರ್ಡ್, ಎಕ್ಸೆಲ್, ಸೇಕ್ರೆಡ್ ಹಾರ್ಟ್, ಹೊದವಾಡ, ಕೆ.ಪಿ.ಎಸ್., ಮರ್ಕಝ್ ಪ್ರೌಢಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಪಾಲ್ಗೊಂಡಿದ್ದರು.