ಸೋಮವಾರಪೇಟೆ, ಆ. ೩೦: ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗೆ ಸಂಬAಧಿ ಸಿದಂತೆ ಸೋಮವಾರಪೇಟೆ ತಾಲೂಕಿನಲ್ಲಿ ೨೪೮ ಹಾಗೂ ಕುಶಾಲನಗರ ತಾಲೂಕಿನಲ್ಲಿ ೨೧೮ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಇನ್ನು ಎರಡೂ ತಾಲೂಕಿನಲ್ಲಿ ಒಟ್ಟು ೨೭ ಕಾಮಗಾರಿ ಬಾಕಿ ಇದ್ದು, ಒಂದು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಭಿಯಂತರ ವೀರೇಂದ್ರ ತಿಳಿಸಿದರು.

ಇಲ್ಲಿನ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಆಡಳಿತಾಧಿಕಾರಿ ಅಬ್ದುಲ್ ನಭಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಗುಣಮಟ್ಟದ ಕಾಮಗಾರಿ ನಿರ್ವಹಣೆಗೆ ಆದ್ಯತೆ ನೀಡಬೇಕು. ಉಳಿದಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಬೇಕೆಂದು ಇಲಾಖಾಧಿಕಾರಿಗೆ ಆಡಳಿತಾಧಿಕಾರಿ ಸೂಚನೆ ನೀಡಿದರು.

ತಾಲೂಕಿನಲ್ಲಿ ಎಲ್ಲಾ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರಿದ್ದು, ಖಾಲಿ ಇರುವ ಹುದ್ದೆಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲೂ ಶೇಕಡಾವಾರು ಉತ್ತಮ ಫಲಿತಾಂಶ ದೊರೆತಿದೆ. ಮಳೆಗಾಲದ ರಜೆಯನ್ನು ಸರಿದೂಗಿಸಲು ಈಗಾಗಲೇ ಬೆಳಿಗ್ಗೆ ಮತ್ತು ಸಂಜೆ ವಿಶೇಷ ತರಗತಿಗಳು ಹಾಗೂ ಶನಿವಾರ ಸಂಜೆಯವರೆಗೂ ತರಗತಿಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಸಭೆಗೆ ತಿಳಿಸಿದರು.

ಮಕ್ಕಳ ಆರೋಗ್ಯದ ದೃಷ್ಟಿಯಿಂದ ತಾಲೂಕಿನಲ್ಲಿರುವ ಎಲ್ಲಾ ಶಾಲೆಗಳ ೩೦೧ ಅಡುಗೆ ಸಿಬ್ಬಂದಿಗಳಿಗೂ ಕಡ್ಡಾಯವಾಗಿ ಆರೋಗ್ಯ ತಪಾಸಣೆ ನಡೆಸುವುದು ಅಗತ್ಯ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್‌ಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್ ಅವರಿಗೆ ಸೂಚಿಸಿದರು.

ಪಶು ಸಂಗೋಪನೆ ಇಲಾಖೆಯಿಂದ ಈಗಾಗಲೇ ರಾಸುಗಳಿಗೆ ಕಾಲು ಬಾಯಿ ಜ್ವರದ ಲಸಿಕೆ, ಚರ್ಮಗಂಟು ನಿವಾರಣಾ ಲಸಿಕೆ ನೀಡಲಾಗಿದೆ. ಹಾಲು ಮಾರಾಟ ಕೇಂದ್ರಗಳ ಸಂಖ್ಯೆ ಕಡಿಮೆ ಇರುವ ಕಾರಣ ಹಸು ಸಾಕಾಣಿಕೆ ಕಡಿಮೆಯಾಗಿದೆ. ಆದರೂ ತಾಲೂಕಿನಲ್ಲಿ ಹೈನುಗಾರಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಡಾ. ರಾಜಶೇಖರ್ ಸಭೆಗೆ ಮಾಹಿತಿ ನೀಡಿದರು.

ಪ್ರಸಕ್ತ ಮಳೆಗಾಲದಲ್ಲಿ ಸೋಮವಾರಪೇಟೆ ತಾಲೂಕಿನಲ್ಲಿ ೬೬೦ ವಿದ್ಯುತ್ ಕಂಬಗಳು ಹಾಗೂ ೧೫ ಟ್ರಾನ್ಸ್ಫಾರ್ಮರ್‌ಗೆ ಹಾನಿಯಾಗಿದ್ದು ಸೆಸ್ಕ್ ಇಲಾಖೆಯಿಂದ ದುರಸ್ತಿಪಡಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗಿದೆ ಎಂದು ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದರು.

ಅರಣ್ಯ, ಕೃಷಿ, ಮೀನುಗಾರಿಕೆ, ಶಿಶು ಅಭಿವೃದ್ದಿ ಇಲಾಖೆ, ಜಿಲ್ಲಾ ಪಂಚಾಯಿತಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖಾ ಕಾರ್ಯಕ್ರಮಗಳು ಹಾಗೂ ಗುರಿ ಸಾಧನೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.