ಕೂಡಿಗೆ, ಆ. ೩೧: ಶಿರಂಗಾಲದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಆಂದೋಲನ ಕಾರ್ಯಕ್ರಮ ನಡೆಯಿತು.
ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಿರಂಗಾಲ, ಕೆನರಾ ಬ್ಯಾಂಕ್ ಹೆಬ್ಬಾಲೆ ಇವುಗಳ ಸಹಯೋಗದೊಂದಿಗೆ ಆಯೋಜಿಸಲಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕ ಮಹೇಶ್ ಕುಮಾರ್, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯು ಅಪಘಾತ ವಿಮೆಯಾಗಿದ್ದು ವಾರ್ಷಿಕ ೨೦ ರೂ.ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ ೨ ಲಕ್ಷ ರೂಗಳ ವರೆಗಿನ ವಿಮಾ ಮೊತ್ತವು ಗ್ರಾಹಕರ ನಾಮಿನಿಗೆ ಸಿಗಲಿದೆ. ವಾರ್ಷಿಕವಾಗಿ ೪೩೬ ರೂಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣ ಹೊಂದಿದರೆ ಅಂತವರ ನಾಮಿನಿಗೂ ಕೂಡ ೨ ಲಕ್ಷ ರೂ ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು. ಅಲ್ಲದೆ ೬೦ ವಯಸ್ಸಿನ ನಂತರ ೧೦೦೦ ರೂ.ಗಳಿಂದ ೫೦೦೦ರೂ ವರೆಗಿನ ಪಿಂಚಣಿ ಹಣ ಸಿಗಬೇಕಾದರೆ ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸುವಂತೆ ತಿಳಿಸಿದರು.
ಆರ್ಥಿಕ ಸಮಾಲೋಚಕರಾದ ನಬಿ ಮಾತನಾಡಿ, ಪ್ರತಿಯೊಬ್ಬರು ನಿಮ್ಮ ಖಾತೆ ಇರುವ ಬ್ಯಾಂಕ್ ಗಳಿಗೆ ತೆರಳಿ ಗುರುತಿನ ಚೀಟಿ, ಆಧಾರ್ ಕಾರ್ಡನ್ನು ನೀಡಿ ಮರು ಕೆವೈಸಿ ಮಾಡಿಸುವಂತೆ ಗ್ರಾಹಕರಿಗೆ ಸಲಹೆ ನೀಡಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೇಮಲತಾ ಮಾತನಾಡಿ, ಈ ಕಾರ್ಯಕ್ರಮ ಅತ್ಯಂತ ಉಪಯುಕ್ತವಾದ ಕಾರ್ಯಕ್ರಮ ಎಂದರು. ಹರೀಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.