ಕೂಡಿಗೆ, ಅ. ೩: ಕೆನರಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ ಇವರ ಸಹಯೋಗದೊಂದಿಗೆ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಕೇಂದ್ರ ಸರಕಾರದ ಆದೇಶದಂತೆ ಆಯಾ ಗ್ರಾಮದ ಬ್ಶಾಂಕ್ ಶಾಖೆ ಮುಖಾಂತರ ಪ್ರತೀ ವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆರ್ಥಿಕ ಸಮಾಲೋಚಕ ನಬಿ, ಜನಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ನಂತರ ಆರ್ಥಿಕ ಸಮಾಲೋಚಕ ಹರೀಶ್ ಸಿ.ಜಿ. ಮಾತನಾಡಿ, ಪ್ರತಿಯೊಬ್ಬರು ಕೆ.ವೈ.ಸಿ. ಕಡ್ಡಾಯವಾಗಿ ಮಾಡಿಸುವಂತೆ ತಿಳಿಸಿದರು. ಎಲ್ಲರೂ ನಿಮ್ಮ ಖಾತೆ ಇರುವ ಬ್ಯಾಂಕ್‌ಗಳಿಗೆ ತೆರಳಿ ತಮ್ಮ ಗುರುತಿನ ಚೀಟಿ ಆಧಾರ್ ಕಾರ್ಡನ್ನು ನೀಡಿ ಮರು ಕೆವೈಸಿ ಮಾಡಿಸುವಂತೆ ಗ್ರಾಹಕರಿಗೆ ಸಲಹೆ ನೀಡಿದರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ ನಬಾರ್ಡ್ನ ಆರ್ಥಿಕ ನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೂಕುಗಳಲ್ಲಿ ಮಾಡುತ್ತಿದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಕೆನರಾ ಬ್ಯಾಂಕ್ ವ್ಯವಸ್ಥಾಪಕ ನಿತನ್, ಆರ್ಥಿಕ ಸಲಹೆಗಾರ ನಬಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು. ಹರೀಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.