ಸಿದ್ದಾಪುರ, ಅ.೧೯ : ಸಿದ್ದಾಪುರದ ವೀರಾಜಪೇಟೆ ರಸ್ತೆ ಕಾಮಗಾರಿಯು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಗುತ್ತಿಗೆದಾರ ಹಾಗೂ ಅಧಿಕಾರಿಗಳ ಕ್ರಮವನ್ನು ಖಂಡಿಸಿ ತಾ ೨೩ರಂದು ಸಿದ್ದಾಪುರದಲ್ಲಿ ಹಮ್ಮಿಕೊಂಡಿದ್ದ ಬಂದ್ ಅನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಕೈ ಬಿಡಲಾಗಿದೆ ಎಂದು ಹೋರಾಟ ಸಮಿತಿಯ ಅಧ್ಯಕ್ಷ ವಿ.ಕೆ.ಗಿರೀಶ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ಸಿದ್ದಾಪುರ -ವೀರಾಜಪೇಟೆ ರಸ್ತೆ ಕಾಮಗಾರಿಯು ಮಂದಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ತಾ.೨೩ ರಂದು ಸಿದ್ದಾಪುರದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಮಾಡಲು ನಿರ್ಧರಿಸಲಾಗಿತ್ತು. ಆದರೆ ಲೋಕೋಪಯೋಗಿ ಇಲಾಖೆಯ ವೀರಾಜಪೇಟೆ ತಾಲೂಕಿನ ಮುಖ್ಯ ಅಭಿಯಂತರ ಸತೀಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಭರವಸೆಯನ್ನು ನೀಡಿದ್ದಾರೆ.

ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಯು ವಿಳಂಬವಾಗಲು ಕಾರಣ ಎಂದು ಮುಖ್ಯ ಅಭಿಯಂತರರು ತಿಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯ ಉನ್ನತ ಅಧಿಕಾರಿಯ ಭರವಸೆ ಹಿನ್ನೆಲೆಯಲ್ಲಿ ಬಂದ್ ಕೈ ಬಿಡಲಾಗಿದೆ ಎಂದು ತಿಳಿಸಿದರು.