ಮಡಿಕೇರಿ, ಅ. ೧೯: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಶಿಕ್ಷಣ ಇಲಾಖೆ, ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳು, ಎನ್.ಎಸ್.ಎಸ್. ಘಟಕದ ಸಹಯೋಗದೊಂದಿಗೆ "ನಮ್ಮ ನಡೆ ಹಸಿರೆಡೆಗೆ": "ಗೋ ಗ್ರೀನ್ ಅಭಿಯಾನ": ೨೦೨೫ ದಡಿ ಸ್ವಚ್ಛ ದೀಪಾವಳಿ, ಸ್ವಸ್ಥ ದೀಪಾವಳಿ-೨೦೨೫ ಅಂಗವಾಗಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತು ಜಿಲ್ಲಾಮಟ್ಟದ ಜಾಗೃತಿ ಅಭಿಯಾನ ಏರ್ಪಡಿಸಲಾಗಿತ್ತು.

ಹಣತೆ (ಮಣ್ಣಿನ ದೀಪ) ಬೆಳಗಿಸಿ ಹಸಿರು ದೀಪಾವಳಿ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು ಮಾತನಾಡಿ, ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಪ್ರತಿಯೊಬ್ಬರೂ ಮಾಲಿನ್ಯಕಾರಿ ಪಟಾಕಿ ಸಿಡಿಸುವುದನ್ನು ತ್ಯಜಿಸಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸುವ ಮೂಲಕ ಮಾಲಿನ್ಯ ತಡೆಗಟ್ಟಿ ಪರಿಸರ ಸಂರಕ್ಷಣೆಗೆ ವಿಶೇಷ ಒತ್ತು ನೀಡಬೇಕು ಎಂದರು. ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳು ಹಾಗೂ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಚಾಲಕ, ಜಿಲ್ಲಾ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಶಬ್ದ, ವಾಯು ಮತ್ತು ಜಲ ಮಾಲಿನ್ಯ ಹಾಗೂ ನೆಲ ಮಾಲಿನ್ಯದ ಜೊತೆಗೆ ಪ್ರಾಣಿ-ಪಕ್ಷಿ ಜೀವ ಸಂಕುಲಗಳು ಸೇರಿದಂತೆ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗಿ ಪರಿಸರ ವ್ಯವಸ್ಥೆಗೂ ತೀವ್ರ ಧಕ್ಕೆಯುಂಟಾಗುತ್ತದೆ. ಆದ್ದರಿಂದ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ತ್ಯಜಿಸಿ ಮಾಲಿನ್ಯ ತಡೆಗಟ್ಟುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಿಸುವ ಕುರಿತು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಜಿಲ್ಲಾ ಪರಿಸರ ಅಧಿಕಾರಿ ಎಂ.ಜಿ. ರಘುರಾಮ್ ಮಾತನಾಡಿ, ಪರಿಸರಕ್ಕೆ ಹಾನಿಯನ್ನುಂಟು ಮಾಡುವ ಪಟಾಕಿಗಳನ್ನು ಸಿಡಿಸದೇ ತ್ಯಜಿಸುವ ಮೂಲಕ ಹಸಿರು ದೀಪಾವಳಿ ಆಚರಣೆ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.ರಾಷ್ಟಿçÃಯ ಹಸಿರು ಪ್ರಾಧಿಕಾರದ ಆದೇಶದಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನೇ ಬಳಸಬೇಕು. ರಾತ್ರಿ ೮ ರಿಂದ ೧೦ ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ. ಹಸಿರು ಪಟಾಕಿ ಬದಲಿಗೆ ಮಾಲಿನ್ಯಕಾರಿ ಪಟಾಕಿಗಳನ್ನು ಮಾರಾಟ ಮಾಡಿದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಹಸಿರು ದೀಪಾವಳಿ ಆಚರಣೆ ಕುರಿತ ಮಾಹಿತಿಯುಳ್ಳ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ ಪಿ.ಕೆ.ವೆಂಕಟೇಶ್ ಪ್ರಸನ್ನ, ದೀಪಾವಳಿ ಹಬ್ಬದ ಸಂದರ್ಭ ಮಾಲಿನ್ಯಕಾರಿ ಪಟಾಕಿ ತ್ಯಜಿಸಿ ಹಣತೆ ಬೆಳಗಿಸುವ ಕುರಿತು ವಿದ್ಯಾರ್ಥಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಹಸಿರು ದೀಪಾವಳಿ ಆಚರಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಟಿ.ಎಂ. ಸುಧಾಕರ್, ಸ್ಕೌಟ್ಸ್ ರೋವರ್ಸ್ನ ಲೀಡರ್ ನವೀನ್ ಕುಮಾರ್, ಮಂಡಳಿಯ ಯೋಜನಾ ಸಹಾಯಕ ಆಸ್ಟಿನ್, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ರೇಂಜರ್ಸ್ ಮತ್ತು ರೋವರ್ಸ್ ಸ್ವಯಂ ಸೇವಕರು ಹಾಗೂ ವಿದ್ಯಾರ್ಥಿಗಳು ಇದ್ದರು.