ನಾಪೋಕ್ಲು, ನ.. ೮: ಕಕ್ಕಬೆ ಗ್ರಾಮ ಪಂಚಾಯಿತಿಯ ನಾಲಡಿ ಗ್ರಾಮದ ಹೊಳೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಸ್ಥಗಿತಗೊಳಿಸಿದ ಘಟನೆ ನಡೆದಿದೆ. ಕಂದಾಯ ಇಲಾಖೆಯ ನಾಪೋಕ್ಲು ವ್ಯಾಪ್ತಿಯ ನಾಲಡಿ ಗ್ರಾಮದ ಹೊಳೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದರು.

ದೂರಿನ ಅನ್ವಯ ಮಡಿಕೇರಿ ತಾಲೂಕು ತಹಶೀಲ್ದಾರರ ಆದೇಶದಂತೆ ನಾಪೋಕ್ಲು ವಿಭಾಗದ ಕಂದಾಯ ಪರಿವೀಕ್ಷಕ ರವಿಕುಮಾರ್ ಹಾಗೂ ಸಿಬ್ಬಂದಿ ಮತ್ತು ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಾದ ರಾಹುಲ್ ಹಾಗೂ ರಾಯಲ್ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಸ್ಥಗಿತಗೊಳಿಸಿ ಕ್ರಮ ಕೈಗೊಂಡಿದ್ದಾರೆ.

ಮಳೆಗಾಲದಲ್ಲಿ ನಾಲಡಿ ಹೊಳೆ ತುಂಬಿ ಹರಿಯುವುದರಿಂದ ರಸ್ತೆ ಸಂಪರ್ಕ ಸ್ಥಗಿತಗೊಂಡು ಸಂಕಷ್ಟದ ಹಿನ್ನೆಲೆಯಲ್ಲಿ ಅಲ್ಲಿಯ ಸ್ಥಳೀಯರು ಸ್ವಂತ ಖರ್ಚಿನಿಂದ ಸೇತುವೆ ನಿರ್ಮಾಣಕ್ಕೆ ಅಡಿಪಾಯ ಮಾಡಲು ಮುಂದಾಗಿದ್ದರು. ಕೊಡಗು ಸೂಕ್ಷ್ಮ ಪರಿಸರ ಪ್ರದೇಶವಾದ್ದರಿಂದ ಹಾಗೂ ನದಿ ಸಂರಕ್ಷಣೆಯ ಹಿತದೃಷ್ಟಿಯಿಂದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಕೆಲವರಿಂದ ದೂರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾಮಗಾರಿ ಸ್ಥಗಿತಗೊಳಿಸಿದ್ದಾರೆ.

- ದುಗ್ಗಳ ಸದಾನಂದ.