ಗೋಣಿಕೊಪ್ಪಲು, ನ. ೭: ಇದೇ ಮೊದಲ ಬಾರಿಗೆ ಪೊನ್ನಂಪೇಟೆ, ವೀರಾಜಪೇಟೆ ತಾಲೂಕಿನ ಗ್ರಾ.ಪಂ. ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರೊಂದಿಗೆ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸುವ ಮೂಲಕ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅನೇಕ ಪ್ರಮುಖ ನಿರ್ಣಯಗಳನ್ನು ಕೈಗೊಂಡರು.

ಪೊನ್ನAಪೇಟೆ ಸಾಮರ್ಥ್ಯ ಸೌಧದಲ್ಲಿ ಜರುಗಿದ ಪೌರಕಾರ್ಮಿಕರ ಸಭೆಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಪೊನ್ನಣ್ಣ, ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಶೇ.೨೫ ರ ಪರಿಶಿಷ್ಟ ಜಾತಿ, ಪಂಗಡಗಳ ವಿಶೇಷ ಅನುದಾನವನ್ನು ಸದ್ಬಳಕೆ ಮಾಡುವ ಮೂಲಕ ಉಚಿತವಾಗಿ ವಿಮಾ ಸೌಲಭ್ಯ ಜಾರಿಗೊಳಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಪುರಸಭಾ, ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪೌರಕಾರ್ಮಿಕರು ಪ್ರತಿದಿನ ೮ ಗಂಟೆ ಮಾತ್ರ ಕೆಲಸ ನಿರ್ವಹಿಸಬೇಕು. ಅನೇಕ ಪಂಚಾಯಿತಿಗಳಲ್ಲಿ ಮುಂಜಾನೆಯಿAದ ಸಂಜೆಯವರೆಗೂ ಪೌರ ಕಾರ್ಮಿಕರಿಂದ ಕೆಲಸ ಮಾಡಿಸುತ್ತಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಸೂಚನೆ ನೀಡುತ್ತಿದ್ದೇನೆ ಎಂದ ಶಾಸಕರು, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಹಲವು ದಶಕಗಳಿಂದ ವಾಸ ಮಾಡುತ್ತಿರುವ ಜಾಗವನ್ನು ಪೌರ ಕಾರ್ಮಿಕರ ವಸತಿ ಸೌಕರ್ಯ ನೀಡಲು ಜಾಗವನ್ನು ಕಾದಿರಿಸಲು ಸಭೆಯಲ್ಲಿದ್ದ ತಹಶೀಲ್ದಾರ್ ಮೋಹನ್ ಕುಮಾರ್ ಅವರಿಗೆ ಸೂಚನೆ ನೀಡಿದರು. ವೀರಾಜಪೇಟೆ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ೧೫ ಪೌರ ಕಾರ್ಮಿಕರಿಗೆ ಸರಕಾರದ ವತಿಯಿಂದ ಅನುಮೋದನೆ ನೀಡಿಸುವ ಮೂಲಕ ಖಾಯಂ ನೌಕರರನ್ನಾಗಿ ಮಾಡಲಾಗಿದೆ ಎಂದು ಈ ಸಂದರ್ಭ ಮಾಹಿತಿ ನೀಡಿದರು.

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ.ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ಪಂಚಾಯಿತಿಯಿAದಲೇ ಪೌರ ಕಾರ್ಮಿಕರಿಗೆ ವೇತನ ನೀಡಲು ಶಾಸಕರು ನಿರ್ದೇಶನ ನೀಡಿದರು. ಪೌರ ಕಾರ್ಮಿಕರಿಗೆ ವಸತಿ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮುಂದುವರಿಸುವುದಾಗಿ ಭರವಸೆ ನೀಡಿದರು.

ವೀರಾಜಪೇಟೆ ಪುರಸಭಾ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಪೌರ ಕಾರ್ಮಿಕರ ವಸತಿ ಸೌಕರ್ಯಕ್ಕೆ ರೂ. ೪೦ ಲಕ್ಷ ಅನುದಾನವನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದರು.

ಪೌರ ಕಾರ್ಮಿಕರ ಸಂಘದ ರಾಜ್ಯಧ್ಯಕ್ಷ ಡಿ.ಆರ್. ರಾಜು ಮಾತನಾಡಿ, ಪೌರ ಕಾರ್ಮಿಕರ ಸಮಸ್ಯೆ ಆಲಿಸಲು ಖುದ್ದಾಗಿ ಶಾಸಕರು ಸಭೆ ಕರೆದಿರುವುದು ಶ್ಲಾಘನೀಯ, ಪೌರ ಕಾರ್ಮಿಕರಿಗೆ ಸಿಗುವ ಸವಲತ್ತುಗಳನ್ನು ಸಕಾಲದಲ್ಲಿ ಸಿಗುವಂತೆ ಮಾಡಬೇಕು. ಪ್ರಮುಖವಾಗಿ ವಸತಿ ಸೌಕರ್ಯ ಕಲ್ಪಿಸಲು ಶಾಸಕರಲ್ಲಿ ಮನವಿ ಮಾಡಿದರು.

ವಿವಿಧ ಪಂಚಾಯಿತಿಗಳಲ್ಲಿ ಅನೇಕ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಖಾಯಂಗೊಳಿಸು ವಂತೆ ಪೌರ ಕಾರ್ಮಿಕರು ಶಾಸಕರಲ್ಲಿ ಮನವಿ ಮಾಡಿದರು.

ಈ ಬಗ್ಗೆ ಕ್ರಮ ಕೈಗೊಳ್ಳಲು ತಾಲೂಕು ಪಂಚಾಯಿತಿ ಇಓ ಅವರಿಗೆ ನಿರ್ದೇಶನ ನೀಡಿದ ಶಾಸಕ ಎ.ಎಸ್. ಪೊನ್ನಣ್ಣ ಸಮಗ್ರ ವರದಿಯನ್ನು ಜಿಲ್ಲಾ ಪಂಚಾಯಿತಿ ಸಿಇಓ ಅವರಿಗೆ ಕಳುಹಿಸಿದ ನಂತರ ಮಾಹಿತಿ ತಿಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಮಾತನಾಡಿ, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪೌರ ಕಾರ್ಮಿಕರ ಸಮಸ್ಯೆ ಆಲಿಸಲು ಹಾಗೂ ಪರಿಹಾರ ಕಲ್ಪಿಸಲು ಕೈಗೊಂಡ ಸಭೆಯು ಅರ್ಥಪೂರ್ಣವಾಗಿದೆ. ಪೌರ ಕಾರ್ಮಿಕರ ಆರೋಗ್ಯ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪಂಚಾಯಿತಿ ವತಿಯಿಂದಲೇ ವಿಮಾ ಸೌಲಭ್ಯ ಒದಗಿಸಿರುವುದು ಅತ್ಯಂತ ಶ್ಲಾಘನೀಯ ಎಂದರು.

ಸಭೆಯಲ್ಲಿ ಕೊಡಗು ಜಿಲ್ಲಾ ಉಪವಿಭಾಗಾಧಿಕಾರಿಗಳು, ಪೊನ್ನಂಪೇಟೆ ತಹಶೀಲ್ದಾರ್ ಮೋಹನ್ ಕುಮಾರ್, ವೀರಾಜಪೇಟೆ ತಹಶೀಲ್ದಾರ್ ಪ್ರವೀಣ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಅಕ್ರಮ-ಸಕ್ರಮ ಸಮಿತಿಯ ಅಧ್ಯಕ್ಷ ಲಾಲ ಅಪ್ಪಣ್ಣ, ತಾಲೂಕು ಪಂಚಾಯಿತಿ ಇಓ ಅಪ್ಪಣ್ಣ, ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪುರಸಭಾ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಉಪಸ್ಥಿತರಿದ್ದರು.