ಕುಶಾಲನಗರ, ನ. ೧೧: ಕುಶಾಲನಗರದಲ್ಲಿ ಡಿಸೆಂಬರ್ ೨ ರಂದು ನಡೆಯಲಿರುವ ಹನುಮ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಿದ್ಧತೆ ಸಭೆ ನಡೆಯಿತು.

ಕುಶಾಲನಗರ ದಶಮಂಟಪ ಸಮಿತಿ ಅಧ್ಯಕ್ಷ ಎಂ.ಡಿ. ಕೃಷ್ಣಪ್ಪ ಮಾತನಾಡಿ, ಕಳೆದ ಬಾರಿ ಆದ ನ್ಯೂನತೆಗಳನ್ನು ಸರಿಪಡಿಸಿಕೊಂಡು ಈ ಬಾರಿ ಅದ್ದೂರಿಯಾಗಿ ಹನುಮ ಜಯಂತಿ ಆಚರಣೆ ಮಾಡಲು ಊರಿನ ಪ್ರಮುಖರು, ಗಣ್ಯ ವ್ಯಕ್ತಿಗಳು ರಾಜಕೀಯ ಮುಖಂಡರು ಕೈಜೋಡಿಸುವಂತೆ ಮನವಿ ಮಾಡಿಕೊಂಡರು.

ಈ ಸಂದರ್ಭ ಮಾತನಾಡಿದ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ, ಕಳೆದ ಬಾರಿ ಸಾವಿರಾರು ಜನ ಆಗಮಿಸಿದ್ದು ಸರಿಯಾದ ಊಟದ ವ್ಯವಸ್ಥೆ ಮಾಡಲು ಸಾಧ್ಯವಾಗಲಿಲ್ಲ. ಈ ಬಾರಿ ಅಚ್ಚುಕಟ್ಟಾಗಿ ಊಟದ ವ್ಯವಸ್ಥೆಗಾಗಿ ಆಹಾರಮೇಳ ಮಾಡಲು ಸಲಹೆ ನೀಡಿದರು. ಹಾಗೆಯೇ ಹೊಟೇಲ್ ಮಾಲೀಕರ ಮೂಲಕ ತಡರಾತ್ರಿವರೆಗೂ ಹೊಟೇಲ್ ಅನ್ನು ತೆರೆಯಲು ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಮನವಿ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಕಳೆದ ಬಾರಿ ಅದ್ದೂರಿ ಮಂಟಪಗಳನ್ನು ವೀಕ್ಷಣೆ ಮಾಡಲು ಸಾವಿರಾರು ಜನ ಕಾತುರದಿಂದ ಕಾಯುತ್ತಿದ್ದರು. ಆದರೆ ಟಾಬ್ಲೋಗಳು ತಡವಾಗಿ ಆಗಮಿಸಿದ ಕಾರಣ ವೀಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಈ ಬಾರಿ ಮರುಕಳಿಸದಂತೆ ನೋಡಿಕೊಳ್ಳಲು ಸಮಿತಿಯ ಸದಸ್ಯರಿಗೆ ಸಲಹೆ ನೀಡಿದರು.

ಈ ಸಂದರ್ಭ ಕುಶಾಲನಗರ ತಹಶೀಲ್ದಾರ್ ಕಿರಣ್ ಜಿ ಗೌರಯ್ಯ, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಸೋಮವಾರಪೇಟೆ ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ವೀರಾಂಜನೇಯ ಉತ್ಸವ ಸಮಿತಿ ಕಾರ್ಯದರ್ಶಿ ಅನುದೀಪ್ ಮತ್ತಿತರರು ಇದ್ದರು. ಸಭೆಯಲ್ಲಿ ದಶಮಂಟಪ ಸಮಿತಿಯ ಪದಾಧಿಕಾರಿಗಳು, ವಿವಿಧ ಗ್ರಾಮಗಳ ಹನುಮ ಸೇವಾ ಸಮಿತಿ ಪದಾಧಿಕಾರಿಗಳು, ಪ್ರಮುಖರು ಪಾಲ್ಗೊಂಡಿದ್ದರು.