ಕುಶಾಲನಗರ, ನ. ೧೩: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವತಿಯಿಂದ ಎಂಟನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ಕುಶಾಲನಗರದಲ್ಲಿ ಪ್ರಕೃತಿ ಚಿಕಿತ್ಸೆ ಮಾಹಿತಿ ಮತ್ತು ಶಿಬಿರ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಆಶ್ರಯದಲ್ಲಿ ಕುಶಾಲನಗರ ಮಹಾಲಕ್ಷ್ಮಿ ರೆಸಿಡೆನ್ಸಿ ಸಭಾಂಗಣದಲ್ಲಿ ನಡೆದ ಶಿಬಿರಕ್ಕೆ ಕರ್ನಾಟಕ ಜನಜಾಗೃತಿ ವೇದಿಕೆಯ ಕೊಡಗು ಜಿಲ್ಲಾ ಸದಸ್ಯರು ಹಾಗೂ ಉದ್ಯಮಿ ಕೆ ಎಸ್ ರಾಜಶೇಖರ್ ಚಾಲನೆ ನೀಡಿದರು. ಪ್ರಕೃತಿ ಚಿಕಿತ್ಸಾ ಕೇಂದ್ರದ ಡಾ ಅನನ್ಯ ಅವರು ಪ್ರಸಕ್ತ ಪರಿಸ್ಥಿತಿಯಲ್ಲಿ ಮಾನವನ ಜೀವನ ಆಹಾರ ಪದ್ಧತಿ ಬದಲಾವಣೆಯ ಬಗ್ಗೆ ಮಾಹಿತಿ ನೀಡಿ ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಹೊಂದಬೇಕಾಗಿದೆ ಎಂದು ಸಲಹೆ ನೀಡಿದರು.

ಆಹಾರ ಪದ್ಧತಿ ಬದಲಾದಂತೆ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ ಎಂದು ತಿಳಿಸಿದ ಡಾ.ಅನನ್ಯ, ಪ್ರತಿಯೊಬ್ಬರೂ ಒತ್ತಡದ ನಡುವೆ ಬದುಕು ಸಾಗಿಸುವ ಪರಿಸ್ಥಿತಿ ಎದುರಾಗಿದೆ ಎಂದರು.

ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಮೂಲಕ ಉತ್ತಮ ಜೀವನ ಸಾಗಿಸಬಹುದು ಎಂದು ಸಲಹೆ ನೀಡಿದರು. ನವೆಂಬರ್ ೧೮ರಂದು ರಾಷ್ಟಿçÃಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲೆಡೆ ಪ್ರಕೃತಿ ಚಿಕಿತ್ಸೆ ಮಾಹಿತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.

ಜನಜಾಗೃತಿ ವೇದಿಕೆಯ ಕೊಡಗು ಜಿಲ್ಲಾ ಸದಸ್ಯ ಹಾಗೂ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಮೇಲ್ವಿಚಾರಕರಾದ ನಾಗರಾಜ್, ಸೇವಾ ಪ್ರತಿನಿಧಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.