ಸೋಮವಾರಪೇಟೆ, ನ. 20: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಜಿಲ್ಲಾ ಯುವ ಘಟಕದ ವತಿಯಿಂದ ತಾ. 23 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗೌಡಳ್ಳಿ ಬಿಜಿಎಸ್ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಹೆಚ್.ವಿ. ಶಿವಪ್ಪ ಹೇಳಿದರು.
ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ವೀರಾಜಪೇಟೆ ಅರಮೇರಿ - ಕಳಂಚೇರಿ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಅವರುಗಳ ಸಾನ್ನಿಧ್ಯದಲ್ಲಿ ಶ್ರೀ ಹಾನಗಲ್ ಕುಮಾರಸ್ವಾಮಿಗಳ 158ನೇ ಜಯಂತಿ, ಡಾ. ಶ್ರೀ ಶಿವಕುಮಾರಸ್ವಾಮಿಗಳ ಜಯಂತಿ, ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಹಾಗೂ ಬಸವ ಜಯಂತಿಯನ್ನು ಆಚರಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮವನ್ನು ಮಹಾಸಭಾದ ರಾಜ್ಯ ಘಟಕ ಅಧ್ಯಕ್ಷ ಡಾ. ಶಂಕರ್ ಮಹದೇವ್ ಬಿದರಿ ಅವರು ಉದ್ಘಾಟಿಸಲಿದ್ದಾರೆ. ಮಹಾಸಭಾದ ಕೇಂದ್ರ ಘಟಕದ ಉಪಾಧ್ಯಕ್ಷ ಸಚ್ಚಿದಾನಂದ ಮೂರ್ತಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಡಾ. ಮಂತರ್ ಗೌಡ, ಕೇಂದ್ರ ಘಟಕದ ಉಪಾಧ್ಯಕ್ಷೆ ರಾಜೇಶ್ವರಿ ನಾಗರಾಜ್, ಕೇಂದ್ರ ಘಟಕದ ಕೈಗಾರಿಕಾ ಮತ್ತು ವಾಣಿಜ್ಯ ವಿಭಾಗದ ಅಧ್ಯಕ್ಷ ಉಮೇಶ್ ಪಾಟೀಲ್, ರಾಜ್ಯ ಮಾಹಿತಿ ಹಕ್ಕು ಆಯೋಗದ ಮಾಜಿ ಆಯುಕ್ತ ವಿರೂಪಾಕ್ಷಯ್ಯ ಹಾಗೂ ವಿವಿಧ ಮಠಗಳ ಸ್ವಾಮೀಜಿಗಳು ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಲಿದೆ. ಸಮುದಾಯದ ಸಾಧಕರನ್ನು ಸನ್ಮಾನಿಸಲಾಗುವುದು. ತಾ. 16 ರಂದು ನಡೆದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುತ್ತದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಾಂಭಶಿವಯ್ಯ, ಸಹ ಕಾರ್ಯದರ್ಶಿ ಎಂ.ಎಸ್. ಗಣೇಶ್, ತಾಲೂಕು ಘಟಕದ ಅಧ್ಯಕ್ಷ ಕೆ.ಪಿ. ಆದರ್ಶ್, ನಿರ್ದೇಶಕ ಕೆ.ಎಲ್. ಬಾಲಶಂಕರ್ ಇದ್ದರು.