ಸೋಮವಾರಪೇಟೆ, ನ. ೨೮: ಸ್ವಚ್ಛ ಕೊಡಗು-ಸುಂದರ ಕೊಡಗು ಅಭಿಯಾನವನ್ನು ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ಪ್ರವಾಸಿ ತಾಣಗಳಲ್ಲಿ ಕ್ರಿಯಾತ್ಮಕವಾಗಿ ಅನುಷ್ಠಾನಗೊಳಿಸುವ ಸಂಬAಧ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ, ವಿವಿಧ ಸಂಘ-ಸAಸ್ಥೆಗಳು, ಸರ್ಕಾರಿ ಇಲಾಖೆಗಳನ್ನು ಒಳಗೊಂಡAತೆ ಪೂರ್ವಭಾವಿ ಸಭೆ ಇಲ್ಲಿನ ತಾಲೂಕು ಪಂಚಾಯಿತಿ ಇ.ಓ. ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಅರುಣ್ ಕೊತ್ತನಳ್ಳಿ, ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಎಲ್ಲಾ ನಾಗರಿಕರು, ಸರಕಾರಿ ಇಲಾಖೆಗಳ ಅಧಿಕಾರಿಗಳು ಕೈಜೋಡಿಸಬೇಕು. ಈಗಾಗಲೇ ಬಹುತೇಕ ಖಾಸಗಿ ಸಂಸ್ಥೆಗಳು ಸಮಿತಿಯೊಂದಿಗೆ ಕೈಜೋಡಿಸಲು ಮುಂದಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದರು.
ಈ ಹಿಂದೆ ಇಡೀ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಅಭಿಯಾನ ನಡೆದಿದ್ದು, ಭಾರೀ ಪ್ರಮಾಣದ ತ್ಯಾಜ್ಯ ಸಂಗ್ರಹವಾಗಿದ್ದನ್ನು ಕಂಡಿದ್ದೇವೆ. ಕೊಡಗು ಜಿಲ್ಲೆ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಹಿನ್ನೆಲೆ ಇಲ್ಲಿನ ಸ್ವಚ್ಛತೆಯ ಬಗ್ಗೆಯೂ ಕಾಳಜಿ ವಹಿಸಬೇಕಿದೆ. ಕೊಡಗು ದೇಶದಲೇ ಪರಿಶುದ್ಧವಾದ ಗಾಳಿ ನೀಡುವ ಪ್ರದೇಶವಾಗಿದೆ. ಇದನ್ನು ಕಲುಷಿತಗೊಳಿಸಬಾರದು. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಪೂರಕ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ತಿಳಿಸಿದರು.
ಪ್ರವಾಸಿ ತಾಣಗಳಿಗೆ ಆಗಮಿಸುವವರು ತಿಂಡಿ, ತಿನಿಸು, ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿದ್ದಾರೆ. ಇದರೊಂದಿಗೆ ಸ್ಥಳೀಯವಾಗಿಯೂ ನಾವು ಸ್ವಚ್ಛತೆಗೆ ಮೊದಲು ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಮೊದಲಿಗೆ ನಮ್ಮ ಮನೆಗಳಿಂದಲೇ ಸ್ವಚ್ಛ ಕೊಡಗು ಎಂಬ ಅಭಿಯಾನ ಪ್ರಾರಂಭವಾಗಬೇಕಿದೆ ಎಂದು ಅಭಿಪ್ರಾಯಿಸಿದರು.
ಮುಖ್ಯವಾಗಿ ಕಸವಿಲೇವಾರಿ ಸಂಸ್ಕರಣಾ ಘಟಕ ನಿರ್ಮಾಣ, ತ್ಯಾಜ್ಯ ವಸ್ತುಗಳನ್ನು ಬಳಸಿ ಡಾಂಬರೀಕಾರಣ ಮಾಡುವ ವಿಧಾನ ಬಂದಿದ್ದು, ಈ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಚಿಂತನೆ ನಡೆಸಬೇಕು ಎಂದರು.
ಜಿಲ್ಲಾ ಹೋಂಸ್ಟೇ ಮತ್ತು ರೆಸಾರ್ಟ್ ಅಸೋಸಿಯೇಷನ್ ಉಪಾಧ್ಯಕ್ಷ ಬಿ.ಎಸ್. ಸುಂದರ್ ಮಾತನಾಡಿ, ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳನ್ನು ಮನೆಯಲ್ಲೇ ಗೊಬ್ಬರವನ್ನಾಗಿ ಪರಿವರ್ತನೆ ಮಾಡಿ ಹೂ, ತರಕಾರಿ ಗಿಡಗಳಿಗೆ ಬಳಸಬಹುದಾಗಿದೆ. ಹೀಗೆ ಮಾಡಿದರೆ ನಮ್ಮ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿರುತ್ತದೆ ಎಂದರು.
ನಾವು ಪ್ರತಿಸ್ಥಾನ ಸಂಸ್ಥೆಯ ಸುಮನಾ ಮಾತನಾಡಿ, ಪ್ರತಿ ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ ಎಂದರು.
ಸಭೆಯಲ್ಲಿ ರೋಟರಿ ಸಂಸ್ಥೆಯ ರವಿ, ವೀಣಾ, ಜೇಸೀ ಸಂಸ್ಥೆಯ ಅಧ್ಯಕ್ಷೆ ಜಗದಾಂಭ ಗುರುಪ್ರಸಾದ್, ಯಂಗ್ ಇಂಡಿಯನ್ ಫಾಮರ‍್ಸ್ ಅಸೋಸಿಯೇಷನ್ ಕಾರ್ಯದರ್ಶಿ ಸಜನ್ ಮಂದಣ್ಣ, ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ಸಿ.ಕೆ. ರೋಹಿತ್, ಕೆಟಿಡಿಓ ಅಧ್ಯಕ್ಷ ವಸಂತ್, ಸಮಿತಿಯ ಕಾರ್ಯದರ್ಶಿ ಆದರ್ಶ್ ತಮ್ಮಯ್ಯ ಸೇರಿದಂತೆ ಇನ್ನಿತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗಿಯಾಗಿ ಸಲಹೆ ನೀಡಿದರು. ತಾಲೂಕು ಪಂಚಾಯಿತಿ ಅಧಿಕಾರಿಗಳಾದ ಶ್ರೀನಿವಾಸ್ ಮತ್ತು ಸೌಮ್ಯ ಅವರುಗಳು, ಸಂಘ-ಸAಸ್ಥೆಗಳ ಪದಾಧಿಕಾರಿಗಳ ಸಲಹೆಗಳನ್ನು ಪಟ್ಟಿಮಾಡಿಕೊಂಡರು. ಅಭಿಯಾನದ ಯಶಸ್ಸಿಗೆ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಂಘ-ಸAಸ್ಥೆಗಳ ಸಹಭಾಗಿತ್ವದೊಂದಿಗೆ ಕಾರ್ಯಯೋಜನೆ ರೂಪಿಸಲಾಗುವುದು ಎಂದರು.