ಪೊನ್ನಂಪೇಟೆ, ನ. ೩೦: ಪತ್ರಿಕೆಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಪತ್ರಕರ್ತ ಜಗದೀಶ್ ಜೋಡುಬೀಟಿ ಹೇಳಿದರು.
ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ, ಗೋಣಿಕೊಪ್ಪಲು ಕಾವೇರಿ ಕಾಲೇಜು ಎನ್. ಎಸ್. ಎಸ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ವಾರ್ಷಿಕ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪತ್ರಿಕಾ ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಯುವಜನತೆ ಎಂಬ ವಿಷಯದ ಬಗ್ಗೆ ಮಾತನಾಡಿದ ಅವರು
ಪತ್ರಿಕೆಗಳು ವಿಶ್ವಾಸಾರ್ಹ ಮಾಹಿತಿಯ ಮೂಲವಾಗಿದ್ದು, ಯುವ ಜನರಿಗೆ ವಿಭಿನ್ನ ವಿಷಯಗಳ ಬಗ್ಗೆ ತಿಳುವಳಿಕೆಯನ್ನು ನೀಡುತ್ತವೆ. ಪತ್ರಿಕೆಗಳನ್ನ ಹೆಚ್ಚು ಹೆಚ್ಚು ಓದುವುದರಿಂದ ಜ್ಞಾನ ಬಂಡಾರವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸುಗಳಿಸಲು ಸಾಧ್ಯವಾಗುತ್ತದೆ.
ಆದರೆ ಇಂದಿನ ಯುವಜನತೆ ಪತ್ರಿಕೆ ಹಾಗೂ ಪುಸ್ತಕ ಓದುವುದನ್ನು ಕಡಿಮೆ ಮಾಡಿ, ಮೊಬೈಲ್ ಫೋನ್ ಕಡೆಗೆ ಆಕರ್ಷಿತರಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಮಯ ಕಳೆಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ತಮ್ಮ ಓದಿಗೆ ಪೂರಕವಾಗಿ, ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಲು ಹಿತಮಿತವಾಗಿ ಬಳಸಿಕೊಳ್ಳಬೇಕು.
ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಅಧ್ಯಯನ ಮತ್ತು ದೈನಂದಿನ ಚಟುವಟಿಕೆಗಳ ಕಡೆಗೆ ಗಮನಹರಿಸಲು ಕಷ್ಟವಾಗುತ್ತದೆ.
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಅತ್ಯಂತ ವೇಗವಾಗಿ ಹರಡುತ್ತದೆ ಇದರಿಂದ ಯುವ ಜನರು ದಾರಿ ತಪ್ಪುವ ಸಾಧ್ಯತೆ ಇದೆ. ವೈಯಕ್ತಿಕ ಮಾಹಿತಿಯನ್ನು ಅತಿಯಾಗಿ ಹಂಚಿಕೊಳ್ಳುವುದರಿAದ ಅದು ದುರುಪಯೋಗವಾಗುವ ಸಾಧ್ಯತೆ ಇರುತ್ತದೆ. ಆದುದರಿಂದ ಯುವ ಜನತೆ ಸಾಮಾಜಿಕ ಜಾಲತಾಣಗಳ ಸಕಾರಾತ್ಮಕ ಹಾಗೂ ನಕಾರಾತ್ಮಕ ಅಂಶಗಳ ಬಗ್ಗೆ ಅರಿತುಕೊಂಡು ಬಹಳ ಎಚ್ಚರಿಕೆಯಿಂದ ಮುನ್ನಡೆಯಬೇಕು ಎಂದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಅವರು ಮಾತನಾಡಿ, ನೈತಿಕ ಮೌಲ್ಯಗಳು ಮರೆಯಾಗಿರುವ ಈ ಸಂದರ್ಭದಲ್ಲಿ,ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ, ಪರಿಸರ ಸಂರಕ್ಷಣೆ, ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ, ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ ಎಂದರು.
ಹುದಿಕೇರಿ ಕ್ಲಸ್ಟರ್ ನ ಸಿ ಆರ್ ಪಿ ಸೌಮ್ಯ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಹುದಿಕೇರಿ ಗ್ರಾ. ಪಂ. ಸದಸ್ಯ ಕಿರಿಯಮಾಡ ಮಿಲನ್ ಗಣಪತಿ ಮಾತನಾಡಿ ಹಿಂದೆ ಗುರುಕುಲ ಶಿಕ್ಷಣ ಪದ್ಧತಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಬದುಕಿನ ಮೌಲ್ಯಗಳನ್ನು ಕಲಿಯುತ್ತಿದ್ದರು.
ಈಗಿನ ಇಂಗ್ಲಿಷ್ ಶಿಕ್ಷಣ ಪದ್ಧತಿ ಕೇವಲ ಅಂಕಗಳಿಗಷ್ಟೇ ಸೀಮಿತವಾಗಿರುವ ಸಂದರ್ಭದಲ್ಲಿ ಎನ್ ಎಸ್ ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಮೌಲ್ಯಗಳನ್ನು ಬೆಳೆಸುತ್ತಿದೆ ಎಂದರು.
ಈ ಸಂದರ್ಭ ಕಾಫಿ ಬೆಳೆಗಾರರಾದ ಕೊಡಂಗಡ ರೋಷನ್, ಮಾದಿರ ಅಜಿತ್, ಮಂಡAಗಡ ವೀಟು ದೇವಯ್ಯ, ಎನ್ ಎಸ್ ಎಸ್ ಅಧಿಕಾರಿಗಳಾದ ಮಂಡAಗಡ ಎ. ಕುಶಾಲಪ್ಪ, ಪುತ್ತಾಮನೆ ಪೂಜಾ ಶರಣು ಇದ್ದರು.