ವೀರಾಜಪೇಟೆ, ಡಿ. ೫: ಹೆಚ್‌ಐವಿ, ಏಡ್ಸ್ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿದಾಗ ಮಾತ್ರ ಅದರ ಸಂಪೂರ್ಣ ನಿರ್ಮೂಲನೆ ಸಾಧ್ಯ ಎಂದು ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಅಧಿಕಾರಿ ಡಾ. ಸನತ್ ಕುಮಾರ್ ಅಭಿಪ್ರಾಯಪಟ್ಟರು.

ಕೊಡಗು ಜಿಲ್ಲಾ ಪಂಚಾಯಿತಿ, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆಂಷನ್ ಸೊಸೈಟಿ, ವೀರಾಜಪೇಟೆ ತಾಲೂಕು ಆರೋಗ್ಯ ಇಲಾಖೆ ಹಾಗೂ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್, ರೆಡ್ ರಿಬ್ಬನ್ ಘಟಕ, ಯುವ ರೆಡ್‌ಕ್ರಾಸ್ ಘಟಕ, ವೈಯಕ್ತಿಕ ಕೌನ್ಸಿಲಿಂಗ್ ಘಟಕಗಳ ಸಹಯೋಗದಲ್ಲಿ ಸೆಂಟ್ ಆನ್ಸ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನಾಚರಣೆ ೨೦೨೫ ತಾಲೂಕು ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಏಡ್ಸ್ ಕುರಿತು ಆರೋಗ್ಯ ಇಲಾಖೆ, ಏಡ್ಸ್ ನಿಯಂತ್ರಣ ಘಟಕಗಳು ಅದರ ಜೊತೆಗೆ ರೆಡ್ ರಿಬ್ಬನ್ ಕ್ಲಬ್‌ನಂತಹ ಘಟಕಗಳು ಸಮಾಜದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿವೆ.

ಎಲ್ಲರಿಗೂ ಜಾಗೃತಿ ಮೂಡಿಸಿದಾಗ ಮಾತ್ರ ಅದರ ನಿರ್ಮೂಲನೆ ಸಾಧ್ಯ. ಯುವಜನತೆ ತಾವು ಜಾಗೃತರಾಗುವ ಜೊತೆಗೆ ಬೇರೆಯವರಲ್ಲಿಯೂ ಜಾಗೃತಿ ಮೂಡಿಸಬೇಕು. ಏಡ್ಸ್ನ ಆರಂಭಿಕ ರೋಗ ಲಕ್ಷಣಗಳನ್ನು ನಿರ್ಲಕ್ಷಿಸಬಾರದು. ನಾವುಗಳು ಜಾಗೃತರಾದಾಗ ಮಾತ್ರ ಸಮಾಜದಲ್ಲಿ ಇತರರ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವೆಂದರು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಗೃತಿಯನ್ನು ಮೂಡಿಸಿ ಎಂದು ಕರೆಕೊಟ್ಟರು. ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ. ಮದಲೈಮುತ್ತು ಮಾತನಾಡಿ, ಪ್ರತಿಯೊಬ್ಬರೂ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಜೀವಿಸ ಬೇಕು. ಮನುಷ್ಯನು ಯೋಚನಾ ಶಕ್ತಿಯನ್ನು ಹೊಂದಿದ್ದು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಾವು ನಮ್ಮ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಸಾಮಾಜಿಕ ಪ್ರಜ್ಞೆ ಮರೆಯಬಾರದು. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕಿ ಸುನಿತಾ ಮುತ್ತಣ್ಣ ಮಾತನಾಡಿ, ಉತ್ತಮ ಆರೋಗ್ಯದಿಂದ ಸ್ವಾಸ್ಥ÷್ಯ ಸಮಾಜದ ನಿರ್ಮಾಣವಾಗುತ್ತದೆ. ಜಿಲ್ಲಾದ್ಯಂತ ಒಟ್ಟು ೨೦ ಪದವಿ ಕಾಲೇಜುಗಳಲ್ಲಿ ರೆಡ್ ರಿಬ್ಬನ್ ಕ್ಲಬ್‌ನ ಘಟಕಗಳಿದ್ದು ಆ ಘಟಕಗಳ ಮುಖಾಂತರ ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಜೊತೆಗೆ ಸಾರ್ವಜನಿಕ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಪ್ರತಿಯೊಬ್ಬರಲ್ಲಿ ಏಡ್ಸ್ ಕುರಿತು ಸ್ವ ಜಾಗೃತಿ ಮೂಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಏಡ್ಸ್ ಕುರಿತು ಜಾಗತಿಕವಾಗಿಯೇ ಇಂದು ಆರೋಗ್ಯ ಸಂಸ್ಥೆಗಳಿAದ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ನಮ್ಮ ಆರೋಗ್ಯವನ್ನು ಉತ್ತಮವಾಗಿಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು. ಕಾಲೇಜಿನ ಎನ್‌ಎಸ್‌ಎಸ್ ಘಟಕದ ಅಧಿಕಾರಿ ಬಿ.ಎನ್. ಶಾಂತಿಭೂಷಣ್ ಮಾತನಾಡಿದರು.

ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕಿ ಪ್ರತಿಮಾ ಹರೀಶ್ ರೈ, ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಅಧಿಕಾರಿ ವಿಲೀನ, ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕ ಚಿಟ್ಟಿಯಪ್ಪ, ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರದ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕ ಚಂದ್ರಶೇಖರ್ ಉಪಸ್ಥಿತರಿದ್ದರು. ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪಟ್ಟಣದಲ್ಲಿ ಏಡ್ಸ್ ಜಾಗೃತಿ ಜಾಥಾ ನಡೆಸಿದರು. ಜಾಗೃತಿ ಜಾಥಾಕ್ಕೆ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ. ಮದಲೈಮುತ್ತು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜಾಗೃತಿ ಜಾಥಾದಲ್ಲಿ ವಿದ್ಯಾರ್ಥಿಗಳು ಸೂಚನಾ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುವುದರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.