ಕುಶಾಲನಗರ, ಡಿ ೨೬: ಕುಶಾಲನಗರದಲ್ಲಿ ಶ್ರೀ ಡಾ. ಶಿವಕುಮಾರ ಮಹಾಸ್ವಾಮೀಜಿ ಅವರ ಮಂಟಪ ಮತ್ತು ನಾಮಫಲಕ ಉದ್ಘಾಟನೆ ಕಾರ್ಯಕ್ರಮ ಬಲಮುರಿ ಗಣಪತಿ ದೇವಾಲಯ ಬಳಿ ತಾ.೨೮ ರಂದು ಬೆಳಗ್ಗೆ ೧೧ ಗಂಟೆಗೆ ನಡೆಯಲಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಹೆಚ್.ವಿ. ಶಿವಪ್ಪ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕುಶಾಲನಗರದ ಶಿವರಾಮಕಾರಂತ್ ಬಡಾವಣೆಯಲ್ಲಿ ರೂ ೩ ಲಕ್ಷ ವೆಚ್ಚದಲ್ಲಿ ಮಂಟಪ ನಿರ್ಮಿಸಲಾಗಿದೆ. ಶಾಸಕ ಡಾ.ಮಂತರ್ ಗೌಡ ಅವರು ನೂತನ ಮಂಟಪ ಲೋಕಾರ್ಪಣೆಗೊಳಿಸಲಿದ್ದಾರೆ, ಮಾಜಿ ಶಾಸಕ ಅಪ್ಪಚ್ಚುರಂಜನ್ ನಾಮಫಲಕ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಮಠಾಧೀಶರುಗಳು ದಿವ್ಯಸಾನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮ ನಂತರ ದಾಸೋಹ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂಭಶಿವಮೂರ್ತಿ ಮಾತನಾಡಿ, ಮಂಟಪ ನಿರ್ಮಾಣದಲ್ಲಿ ಪುರಸಭೆ ಹಿಂದಿನ ಆಡಳಿತ ಮಂಡಳಿ ಸದಸ್ಯರುಗಳು, ಮುಖ್ಯಾಧಿಕಾರಿಗಳ ಸಹಕಾರ ಪ್ರಮುಖವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಆಯ್ದ ಪ್ರಮುಖರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಸಮಾಜದ ಕುಶಾಲನಗರ ತಾಲೂಕು ಅಧ್ಯಕ್ಷ ಹೆಚ್.ಎಂ. ಮಧುಸೂದನ್, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಂ.ಬಿ. ಸುರೇಶ್, ಜಿಲ್ಲಾ ಕಾರ್ಯದರ್ಶಿ ಗಣೇಶ್, ಕುಶಾಲನಗರ ತಾಲೂಕು ಕಾರ್ಯದರ್ಶಿ ಧರ್ಮೇಂದ್ರ ಇದ್ದರು.