ಮಡಿಕೇರಿ, ಡಿ. ೨೮: ಚೆನ್ನಂಗಿ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ ವಿವಿಧ ಸಾಂಸ್ಕೃತಿಕ, ಆರೋಗ್ಯ, ಪರಿಸರ ಕಾಳಜಿ, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಸೇರಿದಂತೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವೀರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ವಿದ್ಯಾರ್ಥಿಗಳು ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮುಕೊಂಡ ವಿಜು ಸುಬ್ರಮಣಿ ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರುಕ್ಮಿಣಿ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಪೋಷಕರ ಸಹಕಾರ ಅತ್ಯಗತ್ಯವಾಗಿದೆ ಎಂದರು. ವಕೀಲ ವಿಜು ಉತ್ತಪ್ಪ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ, ಶಾಲೆಗೆ ಹಾಜರಾಗುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗಿ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು.
ಬಾಲ್ಯ ವಿವಾಹ, ಪೋಕ್ಸೊ ಸೇರಿದಂತೆ ಇತರ ಕಾಯ್ದೆಗಳ ಬಗ್ಗೆ ಅರಿವು ಜಾಗೃತಿ ಮೂಡಿಸಿದರು. ಈ ಸಂದರ್ಭ ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷಿö್ಮ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷೆ ಈಶ್ವರಿ, ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಸಿದ್ದಪ್ಪ, ಶಾಲಾ ಪ್ರಬಾರ ಮುಖ್ಯ ಶಿಕ್ಷಕಿ ಕೆ.ಕೆ. ಸುಷಾ, ಸಹ ಶಿಕ್ಷಕಿಯರಾದ ಮಂಜುಳಾ, ಪ್ರತಿಮಾ, ಕಲಾವಿದ ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಲೆಯ ಹಳೆ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.